ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 409ರಡಿಯ ಆರೋಪಗಳಿಂದ ಗಾಲಿ ಜನಾ ರ್ದನ ರೆಡ್ಡಿ ಅವರನ್ನು ಕೈಬಿಟ್ಟು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
ಈ ಕುರಿತು ಸಿಬಿಐ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿದೆ. ಅಲ್ಲದೆ, ಐಪಿಸಿ ಸೆಕ್ಷನ್ 409 ಸೇರಿಕೊಂಡಂತೆ ಮೂಲ ಪ್ರಕರಣದ ವಿಚಾರಣೆ ಮುಂದುವರಿಸುವಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ತಿಳಿಸಿದೆ.
ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿ, ವಿಚಾರಣೆಗೆ ಅಂಗೀ ಕರಿಸಿ, ಸಾಕ್ಷಿಗಳ ವಿಚಾರಣೆ ನಡೆಯುತ್ತಿರುವ ಹಂತದಲ್ಲಿ ಆರೋಪಗಳಲ್ಲಿ ಮಾರ್ಪಾಡು ಮಾಡಲು ಅಥವಾ ಸೇರಿಸಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ಹಾಗಾಗಿ, 2018ರ ಸೆ.18ರಂದು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ತೀರ್ಪು ಕಾನೂನುಬಾಹಿರ ಹಾಗೂ ಲೋಪದಿಂದ ಕೂಡಿದೆ. ಆದ್ದರಿಂದ ಈ ತೀರ್ಪನ್ನು ರದ್ದುಗೊಳಿಸಬೇಕು ಎಂದು ಕೋರಿದರು.
ಈ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?: ಮೆಸರ್ಸ್ ಡ್ರೀಮ್ ಲಾಜಿಸ್ಟಿಕ್ ಕಂಪನಿ (ಇಂಡಿಯಾ) ಪ್ರೈವೆಟ್ ಲಿಮಿಟೆಡ್ ಸಂಸ್ಥೆಯು 2009ರ ಜ.1ರಿಂದ 2010ರ ಮೇ 31ರ ಅವಧಿಯಲ್ಲಿ ಬೇಲಿಕೇರಿ ಬಂದರು ಮೂಲಕ 9.16 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ ಜನಾರ್ದನ ರೆಡ್ಡಿ ಹಾಗೂ ಇತರರ ವಿರುದ್ಧ 2012ರ ಸೆ.13ರಂದು ಸಿಬಿಐ, ಎಫ್ಐಆರ್ ದಾಖಲಿಸಿ ಕೊಂಡಿತ್ತು. 2013ರಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.