ಹೊಸದಿಲ್ಲಿ: ಶುಕ್ರವಾರ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಪಂತ್ ಗಾಯಗೊಂಡಿದ್ದಾರೆ. ರೂರ್ಕಿಯಲ್ಲಿರುವ ತನ್ನ ಮನೆಗೆ ಪಂತ್ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಸದ್ಯ ಡೆಹ್ರಾಡೂನ್ ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಂತ್ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಇದೀಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಭೀಕರ ಕಾರು ಅಪಘಾತದ ನಂತರ ಪಂತ್ ಬಗ್ಗೆ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಯ್ ಶಾ, “ ನಾನು ಅವರ ಕುಟುಂಬ ಮತ್ತು ಚಿಕಿತ್ಸೆ ನೀಡುವ ವೈದ್ಯರೊಂದಿಗೆ ಮಾತನಾಡಿದ್ದೇನೆ. ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಸ್ಕ್ಯಾನ್ ಮಾಡಲಾಗುತ್ತಿದೆ. ನಾವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮುನ್ನ ಮ್ಯಾಕ್ಸ್ ಆಸ್ಪತ್ರೆಯ ಡಾ.ಆಶಿಶ್ ಯಾಗ್ನಿಕ್ ಅವರು ರಿಷಬ್ ಪಂತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಅವರ ಸೊಂಟದ ಸುತ್ತ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ ಮತ್ತು ಪ್ರಜ್ಞೆಯಿಂದ ಇದ್ದಾರೆ ಎಂದು ಅವರು ಬಹಿರಂಗಪಡಿಸಿದ್ದಾರೆ.