ರಾಮನಗರ: ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದರ ಧೂಳಯ್ಯ, ದೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿಯನ್ನು ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿ ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಸ್ಮರಿಸಿದರು.
ಶಿಕ್ಷಣ ಮೌಲ್ಯಗಳನ್ನು ನೀಡಬೇಕು: ಕಾಯಕ ಶರಣದ ಜಯಂತಿ ಆಚರಣೆಗೆ ಪ್ರಧಾನ ಭಾಷಣಕಾರರಾಗಿ ಭಾಗವಹಿಸಿದ್ದ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕ ಡಾ ಬಿ.ಸಿ ನಾಗೇಂದ್ರ ಕುಮಾರ್ ಮಾತನಾಡಿ, ಇಂದಿನ ಶಿಕ್ಷಣ ಕೇವಲ ಉದ್ಯೋಗಕ್ಕೆ ಕೇಂದ್ರೀಕೃತವಾಗಿದೆ. ಉದ್ಯೋಗ ಪಡೆಯಲು ಸಹಕಾರಿಯಾಗುವ ಮುನ್ನ ಶಿಕ್ಷಣ ಎಲ್ಲರಲ್ಲೂ ಮಾನವೀಯ ಮೌಲ್ಯಗಳನ್ನು ಬಿತ್ತ ಬೇಕು. ವ್ಯಕ್ತಿತ್ವ ವಿಕಾಸಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಶರಣರು ತಮ್ಮ ವಚನದ ಮೂಲಕ ಸಾಹಿತ್ಯವನ್ನು ಸರಳ ಕನ್ನಡದಲ್ಲಿ ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ತಿಳಿಸಿದ್ದಾರೆ. ಕಾಯಕದಲ್ಲಿ ಸ್ವರ್ಗ ಕಾಣಬಹುದು. ಕಾಯಕವೇ ದೇವರು ಎಂದುಎಂದು ತಿಳಿಸಿಕೊಟ್ಟಿದ್ದಾರೆ. ನಡೆ ಮತ್ತು ನುಡಿ ಒಂದೇ ರೀತಿಯಲ್ಲಿ ಇರಬೇಕು. ಎಂದು ಶರಣರು ವಚನಗಳ ಮೂಲಕ ತಿಳಿಸಿದ್ದಾರೆ. ಶರಣರ ವಚನಗಳನ್ನು ಪಾಲಿಸಿದರೆ ಸಮಾಜದಲ್ಲಿ ಸಾಮಾಜಿಕ ಬದಲಾವಣೆ ಸಾಧ್ಯ ಎಂದರು.
ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಬಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.