ಬೆಂಗಳೂರು: ”ಲೋಕಸಭಾ ಚುನಾವಣೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡದೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಕೇಳಿಕೊಂಡಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೋಮವಾರ ಹೇಳಿದ್ದಾರೆ.
47ರ ಹರೆಯದ ವಿಜಯೇಂದ್ರ ಅವರು ಪದ್ಮನಾಭ ನಗರದ ನಿವಾಸದಲ್ಲಿ ದೇವೇಗೌಡ ಅವರನ್ನು ಭೇಟಿ ಮಾಡಿದ ವಿಜಯೇಂದ್ರ, ಪಾದ ಮುಟ್ಟಿ ಆಶೀರ್ವಾದ ಪಡೆದರು. ಶಾಲು, ಹಾರ ಮತ್ತು ಪುಷ್ಪಗುಚ್ಛವನ್ನು ಅರ್ಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಮಹತ್ವದ ಜವಾಬ್ದಾರಿ ನೀಡಿರುವುದು ದೇವೇಗೌಡರಿಗೆ ಸಂತಸ ತಂದಿದ್ದು, ಮಾಜಿ ಮುಖ್ಯಮಂತ್ರಿ, ನನ್ನ ತಂದೆ ಬಿ.ಎಸ್. ಯಡಿಯೂರಪ್ಪನವರಂತೆ ರಾಜ್ಯಾದ್ಯಂತ ಪ್ರವಾಸ ಮಾಡಬೇಕು ಎಂದು ಸಲಹೆ ನೀಡಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಡಬೇಕು, ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುನ್ನಡೆಯಬೇಕು ಎಂದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದು, ಮುಂದಿನ ವರ್ಷ ನಡೆಯುವ ಚುನಾವಣೆಯು ದೇಶದ ಭವಿಷ್ಯಕ್ಕೆ ಸಂಬಂಧಿಸಿ ನಿರ್ಣಾಯಕವಾಗಿದೆ. ಹೆಚ್ಚಿನ ಯುವಕರನ್ನು ರಾಜಕೀಯಕ್ಕೆ ಸೆಳೆಯಲು ಒತ್ತು ನೀಡಬೇಕು ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿರುವುದಾಗಿ ತಿಳಿಸಿದರು.
”ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದ್ದು ನನ್ನ ರಾಜಕೀಯ ಜೀವನದ ಅವಿಸ್ಮರಣಿಯ ಕ್ಷಣವಾಗಿಸಿತು. ಈ ಹೊತ್ತಿಗೂ ಸ್ಫೂರ್ತಿಯ ಚಿಲುಮೆ ಯಾಗಿರುವ ಅವರ ‘ಹೋರಾಟದ ಛಲ – ಆತ್ಮಸ್ಥೈರ್ಯದ ಬಲ’ ನನ್ನಂಥವರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ.
ಈ ಸಂದರ್ಭದಲ್ಲಿ ಶಾಸಕರಾದ ಎಂ.ಕೃಷ್ಣಪ್ಪನವರು, ಸಿ.ಕೆ.ರಾಮಮೂರ್ತಿ , ಸಂಸದರಾದ ಪ್ರಜ್ವಲ್ ರೇವಣ್ಣ ಅವರು, ಮಾಜಿ ಶಾಸಕ ಡಿ.ಸಿ.ತಮ್ಮಣ್ಣನವರು ಉಪಸ್ಥಿತರಿದ್ದರು” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಎಸ್. ಎಂ. ಕೃಷ್ಣ ಭೇಟಿ
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ”ಅಪಾರ ಅನುಭವವುಳ್ಳ ಹಿರಿಯ ಮುತ್ಸದ್ದಿಗಳಾಗಿರುವ ತಾವು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಲಾಯಿತು” ಎಂದು ವಿಜಯೇಂದ್ರ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಜೆಡಿಎಸ್ ಸೆಪ್ಟೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರ್ಪಡೆಗೊಂಡಿತ್ತು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವ್ಯವಸ್ಥೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸುವುದಾಗಿ ಎರಡು ಪಕ್ಷಗಳು ಹೇಳಿವೆ.