ಮಾಲೂರು: ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ 25ನೇ ಮುಖ್ಯಮಂತ್ರಿಯಾಗಿ 2ನೇ ಬಾರಿ ಎಚ್.ಡಿ. ಕುಮಾರಸ್ವಾಮಿ ಬುಧವಾರ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ
ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ನಗರಾಧ್ಯಕ್ಷ ಟಿ.ರಾಮಚಂದ್ರ, ಸರಳ, ಸಜ್ಜನಿಕೆಯ ಹಾಗೂ ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಮಿಶ್ರ ಸರ್ಕಾರದ ಚುಕ್ಕಾಣಿ ಹಿಡಿಯುತ್ತಿರುವುದು ತಾಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಹರ್ಷ ತಂದಿದೆ ಎಂದು ಹೇಳಿದರು.
ಕಳೆದ ಅವಧಿಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು 20 ತಿಂಗಳ ಕಾಲ ಸುಭದ್ರ ಆಡಳಿತ ನೀಡುವ ಮೂಲಕ ಜನ ಮಾನಸ ದಲ್ಲಿ ಉಳಿದುಕೊಂಡಿದ್ದರು. ಪ್ರಸ್ತುತ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ರಾಜ್ಯದ ಜನತೆಗೆ ಮತಷ್ಟು ಅನುಕೂಲಗಳನ್ನು ಕಲ್ಪಿಸುವ ವಿಶ್ವಾಸವಿದೆ ಎಂದರು.
ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಾಗಿದ್ದ ಕೆ.ಎಸ್. ಮಂಜುನಾಥಗೌಡರು 5 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಮಂಜುನಾಥಗೌಡರು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದರು. ಆದರೆ, ಶಾಸಕರು ಸೋಲನುಭವಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಿಎಂ ಕುಮಾರಸ್ವಾಮಿ ಸೂಚನೆ ಮೇರೆಗೆ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಹೇಳಿದರು.
ಮುಖಂಡ ಎಂ.ಆರ್.ದೇವರಾಜ್ ಮಾತನಾಡಿ, ತಾಲೂಕಿನಲ್ಲಿ ಜಾತ್ಯತೀತವಾಗಿ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಮಾಜಿ ಶಾಸಕ ಮಂಜುನಾಥಗೌಡರು ಜನಮೆಚ್ಚಿದ ನಾಯಕರಾಗಿದ್ದರು. ಆದರೆ, ಚುನಾವಣೆಯಲ್ಲಿ ಸೋತರೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿ ಅವರನ್ನು ಮತ್ತೆ ಶಾಸಕರಾಗಿ ಆಯ್ಕೆ ಮಾಡಲು ಶ್ರಮಿಸಲಾಗುವುದು ಎಂದರು.
ಪುರಸಭಾ ಆಶ್ರಯ ಸಮಿತಿ ಮಾಜಿ ಸದಸ್ಯ ಪಂಚೆ ನಂಜುಂಡಪ್ಪ, ಮುಖಂಡರಾದ ಮುನಿಕೃಷ್ಣ, ಮೂರ್ತಿ, ಸುಬ್ರಹ್ಮಣ್ಯ, ರಘುಗೌಡ, ವೆಂಕಟೇಶ್, ನಂಜುಂಡಪ್ಪ, ಗೂಡು ನಾಗರಾಜ್, ತಿಮ್ಮಾರೆಡ್ಡಿ, ಮುನಿಶಾಮಿಗೌಡ, ರತ್ನಪ್ಪ, ಮೂರ್ತಿ, ನಾಗರಾಜ್, ನವೀನ್ ಇನ್ನಿತರರು ಹಾಜರಿದ್ದರು.