Advertisement

JDS‌ ಮುಗಿಸುವ ಪ್ರಯತ್ನದಲ್ಲಿ ಬಿಜೆಪಿ ವಿಫ‌ಲವಾಗಿದ್ದಕ್ಕೆ ಮೈತ್ರಿಯ ಕಪಟ ನಾಟಕವಾಡಿದೆ :HDK

09:21 PM Jan 03, 2021 | Team Udayavani |

ಬೆಂಗಳೂರು: ಜೆಡಿಎಸ್‌ ಮುಗಿಸುವ ಪ್ರಯತ್ನ ವಿಫ‌ಲವಾಗಿದೆ ಎಂಬುದು ಮನವರಿಕೆಯಾಗಿರುವುದರಿಂದ ಬಿಜೆಪಿಯು ಮೈತ್ರಿ ಕಪಟ ನಾಟಕವಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್‌, ಎನ್‌ಡಿಎ ಸೇರಲಿದೆ ಎಂಬುದೆಲ್ಲಾ ಅಪ್ಪಟ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಈ ಸಂಬಂಧ ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಬಿಜೆಪಿ ನಡೆ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಇತರರ ಹೇಳಿಕೆಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಎದುರು ಮೈತ್ರಿ ಪ್ರಸ್ತಾಪ ಇಟ್ಟವರು ಯಾರು?’ ಎಂದು ಪ್ರಶ್ನಿಸಿದ್ದಾರೆ.

ಯಕಶ್ಚಿತ್‌ ಕೇಂದ್ರ ಮಂತ್ರಿ ಸ್ಥಾನಕ್ಕಾಗಿ ಆಸೆ ಪಡುವ ವ್ಯಕ್ತಿ ನಾನಲ್ಲ. ಜೆಡಿಎಸ್‌ ವಿರುದ್ಧ ಅಪಪ್ರಚಾರಕ್ಕೆ ಮುಂದಾದರೆ ಪ್ರಧಾನಿಯವರೊಂದಿಗಿನ ಬಾಂಧವ್ಯ, ಮುಖ್ಯಮಂತ್ರಿಗಳ ಬಗ್ಗೆ ಇರುವ ಗೌರವ ಹಾಗೂ ವಿರೋಧಕ್ಕಾಗಿಯೇ ವಿರೋಧ ಪಕ್ಷವಾಗಿರಬಾರದು ಎಂಬ ಆಶಯಕ್ಕೆ ಧಕ್ಕೆಯಾಗಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ:ಪ್ರತಿಯೊಬ್ಬ ರೈತನೂ ಸತ್ಯಾಗ್ರಹಿ: ಈ ಚಳುವಳಿಯಿಂದ ಅವರ ಹಕ್ಕುಗಳು ಮರಳಿ ಸಿಗುತ್ತವೆ: ರಾಹುಲ್

“ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿಯೇ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ’ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

ನೈತಿಕವಲ್ಲದ ರಾಜಕಾರಣ
“ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ’ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆಪಡಲ್ಲ
“1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿವಂಗತ ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ’ ಎಂದು ಹೇಳಿದ್ದಾರೆ.
“ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫ‌ಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next