Advertisement
ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸರಾಜ್ ಬೊಮ್ಮಾಯಿ, ನೈಸ್ ಯೋಜನೆಯನ್ನು ಯಾವ ಮುಲಾಜು ಇಲ್ಲದೆ ಸರಕಾರದ ವಶಕ್ಕೆ ಪಡೆಯಬೇಕು ಹಾಗೂ ಉನ್ನತ ಮಟ್ಟದ ತನಿಖೆ ನಡೆಯಬೇಕು. ಜಂಟಿ ಸದನ ಸಮಿತಿ ವರದಿಯ ಪ್ರಕಾರ ಹಾಗೂ ನ್ಯಾಯಾಲಯಗಳು ನೀಡಿರುವ ಆದೇಶದಂತೆ ಆ ಇಡೀ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.
Related Articles
Advertisement
ಈಗ ಬ್ರ್ಯಾಂಡ್ ಬೆಂಗಳೂರು ಎಂದು ಜಪ ಮಾಡುತ್ತಿರುವವರೇ ಹಿಂದೆ ನೈಸ್’ನೊಳಕ್ಕೆ ನೈಸಾಗಿ ಸೇರಿಕೊಂಡು ಸಹಕಾರ ನೀಡಿದ್ದರು. ಈಗ ಅವರೇ ಅಧಿಕಾರದಲ್ಲಿ ಇದ್ದಾರೆ. ಅದಕ್ಕೆ ಎರಡೂ ಪಕ್ಷಗಳ ವತಿಯಿಂದ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಅಲ್ಲದೆ; ನೈಸ್ ರಸ್ತೆಯ ಸುತ್ತಮುತ್ತ ನಮ್ಮ ಪಕ್ಷವೂ ಒಳಗೊಂಡಂತೆ ಬೇರೆ ಯಾವುದೇ ಪಕ್ಷದ ರಾಜಕಾರಣಿಗಳ ಭೂಮಿ ಇದ್ದರೆ ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಲಿ. 2012ರೊಳಗೆ ಕಾಂಕ್ರೀಟ್ ರಸ್ತೆ ಮಾಡದೆ ಟೋಲ್ ಸಂಗ್ರಹ ಮಾಡುವಂತಿಲ್ಲ ಎನ್ನುವ ಷರತ್ತು ಯೋಜನೆಯಲ್ಲಿ ಇದೆ. ಆದರೆ, ಅಕ್ರಮವಾಗಿ ಟೋಲ್ ಸಂಗ್ರಹ ಮಾಡಲಾಗಿದೆ. ಈವರೆಗೂ ವಸೂಲು ಮಾಡಲಾಗಿರುವ 1325 ಕೋಟಿ ರೂಪಾಯಿ ಟೋಲ್ ಹಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಸರಕಾರ ಕೂಡಲೇ ಹಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಈ ಯೋಜನೆ ಬಗ್ಗೆ ಮಾತನಾಡಲೇಬಾರದು ಎಂದು ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ, ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ 5 ಲಕ್ಷ ದಂಡ ಹಾಕಿದ್ದರು. ಈ ಸಂದರ್ಭದಲ್ಲಿ ಬೊಮ್ಮಾಯಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡು, ಅದರ ಪರಿಣಾಮವಾಗಿ ಒಂದಿಷ್ಟು ನ್ಯಾಯಾಲಯ ಆ ಕಂಪನಿಗೆ ಛೀಮಾರಿ ಹಾಕಿದೆ. ಈಗ ಅಲ್ಲಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ಮಾಡುತ್ತಿದ್ದಾರೆ.ನೈಸ್ ಅಕ್ರಮ ಇತಿಹಾಸದಲ್ಲಿ ಹಿಂದೆಂದೂ ಕಂಡೂ ಕೇಳರಿಯದ ಅಕ್ರಮ. ಇದರ ವಿರುದ್ಧ ಸದನದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ದನಿ ಎತ್ತಿದ್ದಾರೆ. ಅದರ ಅಕ್ರಮವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಸರಕಾರ ಮೀನಮೇಷ ಎಣಿಸದೆ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಇಡೀ ಯೋಜನೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
ಹಿಂದಿನ ಬಿಜೆಪಿ ಸರಕಾರದ ವೇಳೆ ಸಂಪುಟದ ಉಪ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯು ಅನೇಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿಫಾರಸು ಮಾಡಿದೆ. ರಸ್ತೆ ಕಾಮಗಾರಿಗೆ ರೈತರಿಂದ ಸ್ವಾಧೀನಕ್ಕೆ ಪಡೆದ ಭೂಮಿಯನ್ನು ಮಾರಾಟ ಮಾಡಿ ರಿಯಲ್ ಎಸ್ಟೇಟ್ ದಂಧೆ ನಡೆಸಲಾಗಿದೆ ಎಂದು ಆರೋಪಿಸಿದರು.
ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ನೈಸ್ ಯೋಜನೆಯಲ್ಲಿ ಅಕ್ರಮದ ಬಗ್ಗೆ ನಮ್ಮ ಕಾಲದಲ್ಲಿ ಅನೇಕ ಕ್ರಮಗಳು ಆಗಿವೆ. ಆ ನಿಟ್ಟಿನಲ್ಲಿ ಜೆಡಿಎಸ್ – ಬಿಜೆಪಿ ಒಂದಾಗಿ ಹೋರಾಟ ಮಾಡಲು ನಿರ್ಧಾರ ಮಾಡಿವೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ, ಬದಲಿಗೆ ಅನೇಕ ತಿರುವುಗಳು ಇರುತ್ತವೆ. ಈ ರಸ್ತೆ ಕಾಮಗಾರಿಗೆ ಹೆಚ್ಚುವರಿ ಸಾಕಷ್ಟು ಭೂಮಿಯನ್ನೂ ಪಡೆದುಕೊಳ್ಳಲಾಗಿದೆ. ಈ ಹೆಚ್ಚುವರಿ ಭೂಮಿಯನ್ನು ಏನು ಮಾಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಸರಕಾರಕ್ಕೆ ಇದೆ ಎಂಬ ಮಾತನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಮತ್ತೆ ಹೊಸದಾಗಿ ಜಾಮೀನು ಸ್ವಾಧೀನಕ್ಕೆ ಪಡೆಯುವ ಹುನ್ನಾರವನ್ನು ನೈಸ್ ಕಂಪನಿ ನಡೆಸಿದೆ ಎಂದು ಆರೋಪಿಸಿದರು.
ಮುಖ್ಯವಾಗಿ ನೈಸ್ ಯೋಜನೆಗೆ ನೀಡಲಾಗಿರುವ ಹೆಚ್ಚುವರಿ ಭೂಮಿಯನ್ನು ಕಾನೂನು ಪ್ರಕಾರವೇ ಹಿಂಪಡೆಯಲು ಸಂಪುಟ ಉಪ ಸಮಿತಿ ಕೂಡ ಸ್ಪಷ್ಟವಾಗಿ ಶಿಫಾರಸು ಮಾಡಿದೆ. ಈ ನಿಟ್ಟಿನಲ್ಲಿ ಈಗಿನ ರಾಜ್ಯ ಸರಕಾರ ನೈಸ್ ಯೋಜನೆಯಿಂದ ಹೆಚ್ಚುವರಿ ಭೂಮಿಯನ್ನು ಈ ಕೂಡಲೇ ವಾಪಸ್ ಪಡೆಯಲು ನಿರ್ಧಾರ ಕೈಗೊಳ್ಳಬೇಕು.ಹೆಚ್ಚುವರಿ ಜಮೀನು ಅಂತಿಮವಾಗಿ ರಿಯಲ್ ಎಸ್ಟೇಟ್ ದಂಧೆಗೆ ಬಳಕೆ ಆಗುತ್ತಿದೆ. ಸರಕಾರ ಅದನ್ನು ತಡೆದು ವಶಕ್ಕೆ ಪಡೆಯಬೇಕು. ಈಗಾಗಲೇ ಬೆಂಗಳೂರು ಮೈಸೂರು ನಡುವೆ ಸುಸಜ್ಜಿತ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ ಆಗಿರುವುದರಿಂದ ನೈಸ್ ರಸ್ತೆ ಅಗತ್ಯ ಇಲ್ಲ. ಟೋಲ್ ಕೂಡ ಹೆಚ್ಚುವರಿಯಾಗಿ ಸಂಗ್ರಹ ಆಗಿದ್ದು, ಅದರ ಲೆಕ್ಕಪರಿಶೋಧನೆ ನಡೆಸಿ ಹಣವನ್ನು ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.
ಸದನ ಸಮಿತಿ ವರದಿ, ಸಂಪುಟ ಉಪ ಸಮಿತಿ ವರದಿ, ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಸರಕಾರದ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯ ಸರಕಾರದ ಸ್ಪಷ್ಟ ನಿಲುವು ತಿಳಿಸಬೇಕು. ಈ ಸರಕಾರದಲ್ಲಿ ಇರುವವರು ಈ ಹಿಂದೆ ಈ ಯೋಜನೆಗೆ ಸಂಬಂಧಿಸಿ ಹೇಗೆ ನಡೆದುಕೊಂಡಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಈ ಸರಕಾರ ಭ್ರಷ್ಟಾಚಾರದ ವಿರುದ್ದ ಇದೆಯೊ ಇಲ್ಲವೋ ಅನ್ನುವುದು ಈ ಪ್ರಕರಣದಿಂದ ತಿಳಿಯಲಿದೆ ಎಂದರು.
ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾಪೂರ್ಯ ನಾಯಕ್, ಶಾಸಕರಾದ ನೆಮಿರಾಜ್ ನಾಯಕ್, ರಾಜೂಗೌಡ, ಕರೆಮ್ಮ ನಾಯಕ್, ಕೆ. ಎ.ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಹಾಜರಿದ್ದರು.