Advertisement

JDS; ದೇವೇಗೌಡರ ವಿರುದ್ಧ ಸಿಎಂ ಸಿದ್ದು ಕಿಡಿ : ನನ್ನದು ಗರ್ವವಲ್ಲ ಕನ್ನಡಿಗರ ಸ್ವಾಭಿಮಾನ

12:23 AM Mar 31, 2024 | Team Udayavani |

ಬೆಂಗಳೂರು: “ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣ ಕಣದಲ್ಲಿರುವ ಸ್ವಾಭಿಮಾನ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇ ಗೌಡರ ಹೇಳಿಕೆಗೆ ಪತ್ರಿಕಾ ಪ್ರಕಟನೆಯ ಮೂಲಕ ಉತ್ತರಿಸಿರುವ ಅವರು, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆಯೆತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ.

Advertisement

ವೈಯಕ್ತಿಕ ಇಲ್ಲವೇ ರಾಜಕೀಯ ಲಾಭಕ್ಕಾಗಿ ನಾನು ಯಾರ ಜತೆಗೂ ರಾಜಿ ಮಾಡಿಕೊಳ್ಳಲಾರೆ. ಅಂತಹ ಪರಿಸ್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆಯೇ ವಿನಾ ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ ಎಂದು ತಿರುಗೇಟು ನೀಡಿದ್ದಾರೆ.

ದೇವೇಗೌಡರ ಜತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣಾ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ… ಹೀಗೆ ಕರ್ನಾಟಕಕ್ಕೆ ದ್ರೋಹ ಎಸಗುತ್ತ ಬಂದಿದೆ. ಹೀಗಿದ್ದರೂ ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯಕ್ಕೆ ಕ್ಷಮೆಯೇ ಇಲ್ಲ. ತೆರಿಗೆ ರೂಪದಲ್ಲಿ ಕೇಂದ್ರ ಸರಕಾರದ ಖಜಾನೆಗೆ ಸಂದಾಯವಾಗುವ ಕನ್ನಡಿಗರ ಒಂದು ರೂಪಾಯಿಗೆ ಪ್ರತಿಯಾಗಿ ಕೇವಲ 13 ಪೈಸೆಯಷ್ಟು ಹಣ ಮಾತ್ರ ಕರ್ನಾಟಕಕ್ಕೆ ವಾಪಸು ಬರುತ್ತಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಲ ಮೊದಲಾದ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಕೂಡ ಕೇಂದ್ರ ಸರಕಾರದ ಅನ್ಯಾಯವನ್ನು ಕೂಗಿ ಕೂಗಿ ಹೇಳುತ್ತಿವೆ. ಆದರೆ ಕರ್ನಾಟಕದ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ ಮಾತ್ರ ನಮ್ಮ ನೆಲ-ಜಲ-ಭಾಷೆಯ ವಿರೋಧಿಗಳ ಜತೆಯಲ್ಲಿ ರಾಜಿ ಮಾಡಿಕೊಂಡು ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next