ಮೈಸೂರು: ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಂ ಎಂಬುದನ್ನು ಮೇಯರ್ ಚುನಾವಣೆ ವೇಳೆ ಸಾಬೀತು ಪಡಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.
ಇದನ್ನೂ ಓದಿ:ತಾಲಿಬಾನ್ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ ಶಾಸಕ ಮುನೀರ್ ಗೆ ಕೊಲೆ ಬೆದರಿಕೆ
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪಾಲಿಕೆಯಲ್ಲಿ ಜೆಡಿಎಸ್ ಕಾಂಗ್ರೆಸ್ ನಡುವಿನ ಮೈತ್ರಿ ಮುರಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಮ್ಮ ಪಕ್ಷ ಜೆಡಿಎಸ್‌ನೊಂದಿಗೆ ಮುಂದೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ. ಬಿಜೆಪಿಗಿಂತ ಜೆಡಿಎಸ್ ಪಕ್ಷ ಡೇಂಜರ್ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರದ ವೈಫಲ್ಯದಿಂದಾಗಿ ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಇದರಿಂದ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮೈಸೂರಲ್ಲಿ ದಿನೇ ದಿನೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದರೆ ಕಾನೂನು ವ್ಯವಸ್ಥೆ ಕುಸಿದಿರುವುದು ತಿಳಿಯುತ್ತದೆ.
ದೆಹಲಿಯ ನಿರ್ಭಯಪ್ರಕರಣದವೇಳೆ ಬಿಜೆಪಿ ನಾಯಕರು ರಸ್ತೆಯಲ್ಲೇ ಪಲ್ಟಿ ಹೊಡೆಯುತ್ತಿದ್ದರು. ಈಗ ಮೈಸೂರಿನ ವಿಷಯ ಅವರ ಕಣ್ಣಿಗೆ ಕಾಣಿಸುತ್ತಿಲ್ಲ. ನಮಗೆ ಮಹಿಳಾ ಆಯೋಗದ ಅಧ್ಯಕ್ಷರು ಯಾರು ಅಂತಾನೆ ಗೊತ್ತಾಗುತ್ತಿಲ್ಲ. ಗೃಹ ಸಚಿವರು, ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಹೊಂದಾಣಿಕೆಯೇ ಇಲ್ಲ. ಯಾವ ಆಧಾರದ ಮೇಲೆ ತನಿಖೆ ಆರಂಭಿಸುತ್ತಿದ್ದೀರಿ ಎಂಬ ಮಾಹಿತಿಇಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ
ಎಂದರು. ಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಮತ್ತಿತರರು ಹಾಜರಿದ್ದರು.