ಮುಳಬಾಗಿಲು: ರೈತನ ಮಗ ಎನ್ನುವ ಎಚ್. ಡಿ.ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಕೂಡಲೇ ಎತ್ತಿನಹೊಳೆ ಯೋಜನೆ ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ಆದ್ದರಿಂದ, ಅವರಿಗೆ ಅಧಿಕಾರ ನೀಡಬಾರದು. ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಹೀನಾಯವಾಗಿ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಹೊರವಲಯದಲ್ಲಿ ಶನಿವಾರ ನಡೆದ ಸಾಧನಾ ಸಂಭ್ರಮ ಸಮಾವೇಶದಲ್ಲಿ ಪಾಲ್ಗೊಂಡು ಅವರು
ಮಾತನಾಡಿದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆ ರದ್ದು ಮಾಡುವುದಾಗಿ ಕುಮಾರಸ್ವಾಮಿ
ಹೇಳಿತ್ತಿರುವುದು ಸರಿಯೇ?. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹಾಗಾದರೆ ಕುಡಿಯುವ ನೀರು ಬೇಡವೇ ಎಂದು ಜನರನ್ನು ಕೇಳಿದರು.ಬಳಿಕ, ಬಂಗಾರಪೇಟೆಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ ಜೀವನದಲ್ಲಿ ಮತ್ತೆಂದಿಗೂ ಮುಖ್ಯಮಂತ್ರಿಗಳಾಗುವುದಿಲ್ಲ.
2018ರ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸ್ವತಃ ತಪ್ಪು ಮಾಡಿ ಜೈಲಿಗೆ ಹೋಗಿ ಬಂದವರು. ಇವರು ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಶಿಕ್ಷೆ ಅನುಭವಿಸಿರುವ ಯಡಿಯೂರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು,ಎಸ್.ಎನ್.ಕೃಷ್ಣಯ್ಯಶೆಟ್ಟಿ, ಹಾಲಪ್ಪ ಮುಂತಾದವರ ಪಕ್ಕದಲ್ಲಿ ಕುಳಿತು ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯೇ ಎಂದು ಪ್ರಶ್ನಿಸಿದರು.