ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಹೆಸರನ್ನು ಅಂತಿಮಗೊಳಿಸಿದೆ.
ಪಕ್ಷದ ಕಚೇರಿಯಲ್ಲಿ ವರಿಷ್ಠ ಎಚ್ ಡಿ ದೇವೇಗೌಡರು ಈ ವಿಚಾರವನ್ನು ತಿಳಿಸಿದರು. ಉಪಚುನಾವಣೆಯು ನವೆಂಬರ್ ಮೂರರಂದು ನಡೆಯಲಿದ್ದು, ನವೆಂಬರ್ 10ಕ್ಕೆ ಮತ ಎಣಿಕೆ ನಡೆಯಲಿದೆ.
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರು ಇತ್ತೀಚೆಗೆ ನಿಧನರಾಗಿದ್ದರು. ಹೀಗಾಗಿ ಇಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಪಕ್ಷವು ಸತ್ಯನಾರಾಯಣ ಅವರ ಪತ್ನಿಗೆ ಟಿಕೆಟ್ ನೀಡಿದೆ.
ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಮಾಜಿ ಸಚಿವ ಟಿ ಬಿ ಜಯಚಂದ್ರಗೆ ಟಿಕೆಟ್ ನೀಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದರೆ ಕೆಲ ದಿನಗಳ ಹಿಂದೆ ಡಾ ರಾಜೇಶ್ ಗೌಡ ಬಿಜೆಪಿ ಗೆ ಸೇರ್ಪಡೆಯಾಗಿದ್ದು, ಅವರಿಗೆ ಬಿಜೆಪಿ ಮಣೆ ಹಾಕಲಿದೆ ಎನ್ನಲಾಗಿದೆ.
2018ರ ಚುನಾವಣೆಯಲ್ಲಿ ಜೆಡಿಎಸ್ ನ ಸತ್ಯನಾರಾಯಣ ಅವರು ಕೈ ಪಕ್ಷದ ಟಿ ಬಿ ಜಯಚಂದ್ರ ಅವರ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.