ರಾಮನಗರ: ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಗೆ ಕೋವಿಡ್ ನಿಯಮ ಅನ್ವಯವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಚುನಾವಣೆಗೆ ಕೋವಿಡ್ ಬರುವುದಿಲ್ಲವೇ ಎಂದು ವ್ಯಂಗ್ಯವಾಡಿದರು.
ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ನಿಯಮಗಳನ್ನು ರೂಪಿಸುತ್ತದೆ. ಈಗ ಚುನಾವಣೆಗೆ ನಿಯಮಗಳು ಅನ್ವಯವಾಗುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಚುನಾವಣೆಗೆ ಕೋವಿಡ್ ಹೆದರಿ ಓಡಿ ಹೋಗುತ್ತದೆಯೇ ಎಂದರು. ಪ್ರತಿ ಹಂತದಲ್ಲಿಯೂ ಅನಾಹುತ ಆಗದಂತೆ ಸೂಕ್ತ ತೀರ್ಮಾನ ತೆಗೆದುಕೊಂಡು ನಿಯಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಆದರೆ, ನಮಗೆ ಬೇಕಾದಂತೆ ನಿಯಮಗಳನ್ನು ಮಾರ್ಪಾಡು ಮಾಡಿಕೊಳ್ಳಬಾರದು ಎಂದು ಹೇಳಿದರು.
ಗ್ರಾಮಸ್ಥರಿಂದ ಅಹವಾಲು ಆಲಿಕೆ:
ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರೊಂದಿಗೆ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೆಲ ಹೊತ್ತು ಗ್ರಾಮಸ್ಥರ ಅಹವಾಲು ಆಲಿಸಿದರು. ಕಣ್ವ ನಿರಾಶ್ರಿತರು ವಾಸಿಸುತ್ತಿರುವ ಈ ಭಾಗದ ಗ್ರಾಮಸ್ಥರಿಗೆ ಭೂಮಿ ಹಕ್ಕುಪತ್ರ ಬೇಕಾಗಿದೆ. ಹೀಗಾಗಿ ತಾವೇ ಸ್ವತಃ ಡೀಸಿಯವರ ಗಮನ ಸೆಳೆದು ಇಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾಗಿ ಕುಮಾರಸ್ವಾಮಿ ತಿಳಿಸಿದರು.
ತದನಂತರ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಕ್ಷೇತ್ರವ್ಯಾಪ್ತಿಯ ಕನಕಪುರ ತಾಲೂಕಿನ ಹಾರೋಹಳ್ಳಿಯಲ್ಲಿ ನಡೆಯುತ್ತಿದ್ದ ಜಿಲ್ಲಾ ಅಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.