ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ, ನಿಗಮ ಮಂಡಳಿ, ಸಂಸದೀಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿ ಸಂಬಂಧ ಚರ್ಚಿಸಲು ಗುರುವಾರ ಜೆಡಿಎಸ್ ಸಭೆ ಆಯೋಜಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಇರುವುದರಿಂದ ಜಿಲ್ಲಾವಾರು ಹೊಣೆಗಾರಿಕೆ ಸಹ ಸಭೆಯಲ್ಲಿ ನೀಡಲಾಗುವುದು.
ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು, ಸಚಿವರು, ರಾಜ್ಯ, ಜಿಲ್ಲಾ, ತಾಲೂಕು ಪದಾಧಿಕಾರಿಗಳು, 2014 ಹಾಗೂ 2018 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಆನುಭವಿಸಿರುವ ಅಭ್ಯರ್ಥಿಗಳಿಗೆ ಸಭೆಗೆ ಆಹ್ವಾನಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ 11 ಗಂಟೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಭೆ ಉದ್ಘಾಟಿಸಲಿದ್ದು , ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ನಾಯಕರು ಉಪಸ್ಥಿರಲಿದ್ದಾರೆ ಎಂದು ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿರುವ ಎಚ್.ವಿಶ್ವನಾಥ್ ಅವರು ಸಭೆಯಲ್ಲಿ ರಾಜೀನಾಮೆ ವಿಚಾರ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ.ಆದರೆ, ಲೋಕಸಭೆ ಚುನಾವಣೆವರೆಗೂ ವಿಶ್ವನಾಥ್ ಅವರನ್ನೇ ಮುಂದುವರಿಸಲು ದೇವೇಗೌಡರು ಚಿಂತನೆ ನಡೆಸಿದ್ದು , ವಿಶ್ವನಾಥ್ ಮನವೊಲಿಸಲಿದ್ದಾರೆ. ಐವರು ಕಾರ್ಯಾಧ್ಯಕ್ಷರನ್ನು ನೇಮಿಸಿ ಪಕ್ಷ ಸಂಘಟನೆಗೆ ಮುಂದಾಗಲಿದ್ದಾರೆ ಎಂದು ತಿಳಿದು ಬಂದಿದೆ.