ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುವಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು ಆಕ್ಷೇಪಾರ್ಹ ಪದ ಬಳಸಿರುವುದನ್ನು ಖಂಡಿಸಿ ನಗರದಲ್ಲಿ ಮಾಜಿ ಶಾಸಕ ಸಾ.ರಾ. ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ಜೆಡಿಎಸ್ ಕಾರ್ಯಕರ್ತರು, ಎಡಿಜಿಪಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್, ಎಚ್.ಡಿ. ಕುಮಾರಸ್ವಾವಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಸದ್ಯ ಕೇಂದ್ರ ಸಚಿವರೂ ಎಂಬುದನ್ನೂ ಲೆಕ್ಕಿಸದೇ ಎಡಿಜಿಪಿ ಎಂ. ಚಂದ್ರಶೇಖರ್ ಅವರು ಬಳಸಿರುವ ಪದಗಳು ಅವರ ನಡವಳಿಕೆಯನ್ನು ತೋರುತ್ತದೆ. ಪೋಸ್ಟಿಂಗ್‌ಗಾಗಿ ಕೆಲ ಅಧಿಕಾರಿಗಳು ಕಾಂಗ್ರೆಸ್ ನಾಯಕರ ಚಮಚಗಿರಿ ಮಾಡುತ್ತಿದ್ದಾರೆ. ಹಿಮಾಚಲದಿಂದ ರಾಜ್ಯಕ್ಕೆ ವಲಸೆ ಬಂದಿರುವ ಚಂದ್ರಶೇಖರ್ ಐದು ವರ್ಷಗಳ ಅನಂತರ ವಾಪಸ್ ಆಗಬೇಕಿತ್ತು. 11 ವರ್ಷಗಳಿಂದ ಅವರನ್ನು ಹೇಗೆ ಇಲ್ಲಿ ಇರಿಸಿಕೊಳ್ಳಲಾಗಿದೆ. ಕಳೆದ ಐದು ವರ್ಷಗಳಿಂದ ಯಾವುದೇ ವರ್ಗಾವಣೆ ಇಲ್ಲದೆ ಒಂದೇ ಹುದ್ದೆಯಲ್ಲಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಪವಿತ್ರವಾದ ಖಾಕಿ ವಸ್ತ್ರವನ್ನು ತೊಟ್ಟಿರುವ ಅವರು ಸಮವಸ್ತ್ರಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೂ ಅದೇ ರೀತಿ ಕಲಿಸಿಕೊಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.