Advertisement

ಭಾರತ್‌ ಬಂದ್‌ಗೆ ಜೆಡಿಎಸ್‌ ಬೆಂಬಲ

06:00 AM Sep 09, 2018 | Team Udayavani |

ಬೆಂಗಳೂರು: ತೈಲ ದರ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಸೆ.10 ರಂದು ಕರೆ ನೀಡಿರುವ ಭಾರತ್‌ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ.

Advertisement

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕಾಂಗ್ರೆಸ್‌ ಜತೆಗೂಡಿ ಜೆಡಿಎಸ್‌ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದೆ ಎಂದು ಹೇಳಿದರು.
ಜೆಡಿಎಸ್‌ನ ಎಲ್ಲ ಜಿಲ್ಲಾ ಹಾಗೂ ತಾಲೂಕು ಘಟಕಗಳಿಗೆ  ಈ ಕುರಿತು ಸೂಚನೆ ನೀಡಲಾಗಿದ್ದು, ಇಡೀ ದೇಶಾದ್ಯಂತ ಭಾರತ್‌ ಬಂದ್‌ ಯಶಸ್ವಿಗೊಳಿಸಲು ಬಿಜೆಪಿ ಒಕ್ಕೂಟ ಹೊರತುಪಡಿಸಿದ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ಮಾಡಲಿವೆ ಎಂದು ತಿಳಿಸಿದರು.

ಪ್ರತಿಭಟನೆ ಅಂಗವಾಗಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಹಾಗೂ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್‌ ಅಲಿ ಅವರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾನು ಮೈಸೂರಿನಲ್ಲಿ ನಡೆಯಲಿರುವ ಪ್ರತಿಭನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಪುರಭವನದ ಮುಂಭಾಗ ನಗರದ ಶಾಸಕರು, ಸಂಸದರು, ಪಾಲಿಕೆ ಸದಸ್ಯರು ಬೃಹತ್‌ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್‌-ಡೀಸೆಲ್‌, ಅಡುಗೆ ಅನಿಲ ಬೆಲೆ ಗಗನಕ್ಕೆ ಏರಿದೆ. ಇದರಿಂದ ಸಹಜವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗಿ ಬಡ ಹಾಗೂ ಮಧ್ಯಮ ವರ್ಗದವರು ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

Advertisement

ಪ್ರಧಾನಿ ಮನಮೋಹನ್‌ಸಿಂಗ್‌ ಅವರ ಅವಧಿಯಲ್ಲಿ ಪೆಟ್ರೋಲ್‌ ಬೆಲೆ 60 ರೂ. ಇತ್ತು. ಇದೀಗ 80 ರೂ. ಮುಟ್ಟಿದೆ.  ಅಡುಗೆ ಅನಿಲ 475 ರೂ. ಇತ್ತು ಇದೀಗ 900 ರೂ. ವರೆಗೆ ಮುಟ್ಟಿದೆ. ಡಾಲರ್‌ ಮೌಲ್ಯ 55 ರೂ. ಇತ್ತು, ಇದೀಗ 73 ರೂ. ಆಗಿದೆ ಎಂದು ಹೇಳಿದರು.

ಹಿಂದಿನ ಯುಪಿಎ ಸರ್ಕಾರದಲ್ಲಿ ಪೆಟ್ರೋಲ್‌-ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆಯಾದಾಗ ರಸ್ತೆಗೆ ಇಳಿದಿದ್ದ ಸದಾನಂದಗೌಡ, ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಅನಂತಕುಮಾರ್‌ ಹೆಗಡೆ ಇದೀಗ ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಲೇವಡಿ ಮಾಡಿದರು.

ದೇಶದಲ್ಲಿ ಅಲ್ಪಸಂಖ್ಯಾತರು, ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಪ್ರಧಾನಿ ಮೋದಿ ಅವರು ವಿಶ್ವ ಪರ್ಯಟನೆಯಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.

ಪಕ್ಷದ ವಕ್ತಾರ ಹಾಗೂ ವಿಧಾನಪರಿಷತ್‌ನ ಮಾಜಿ ಸದಸ್ಯ ರಮೇಶ್‌ ಬಾಬು, ನಗರ ಅಧ್ಯಕ್ಷ  ಪ್ರಕಾಶ್‌,  ಮುಖಂಡ ಅಮರ್‌ನಾಥ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next