Advertisement
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನೊಂದು ಪಕ್ಷವನ್ನು ನಂಬಿ ನಮ್ಮ ಪಕ್ಷದ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ. ಇಂತಹವರು ಹೋಗುತ್ತಾರೆ ಎಂದು ಹೇಳಿದರೆ ನಾವು ಸರಿ ಮಾಡಿಕೊಳ್ಳುತ್ತೇವೆ. ನಮ್ಮ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡರ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಬಿಬಿಎಂಪಿ ಚುನಾವಣೆಗೂ ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದರು.
ಮಾಜಿ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ರಚಿಸಲಾಗಿದ್ದು, ಸೆ. 1ರಿಂದ ಅವರ ತಂಡ ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕೋರ್ ಕಮಿಟಿ ಸದಸ್ಯರ ವಿಶ್ವಾಸಕ್ಕೆ ಪಡೆದು ತೀರ್ಮಾನಿಸುತ್ತೇವೆ. ನಾನು ಮನೆಯಲ್ಲಿ ಕುಳಿತುಕೊಳ್ಳದೆ ಪಕ್ಷ ಸಂಘ ಟನೆಗಾಗಿ ಕೆಲಸ ಮಾಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸುವ ಸಂಕಲ್ಪ ಮಾಡಿದ್ದೇನೆ. ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ ಎಂದರು.
ಸೆ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು 20 ಸಾವಿರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ನಾನು 91ರ ಹರೆಯದಲಿಲ್ಲೂ ಕೆಲಸ ಮಾಡುತ್ತಿದ್ದು, ಯಾರೂ ನನ್ನನ್ನು ಈ ಸಂದರ್ಭದಲ್ಲಿ ಕೈಬಿಡಬೇಡಿ, ಜಿಲ್ಲೆ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶಕ್ಕೆ ಆಗಮಿಸಿ ಪ್ರಾದೇಶಿಕ ಪಕ್ಷವನ್ನು ಬಲಪಡಿಸಿ ಎಂದು ದೇವೇಗೌಡರು ಮನವಿ ಮಾಡಿದರು. ಪೆನ್‌ಡ್ರೈವ್ ಬಗ್ಗೆ ಮುಂದೆ ಮಾತನಾಡುತ್ತೇನೆ
ಕುಮಾರಸ್ವಾಮಿ ಅವರ ಪೆನ್ ಡ್ರೈವ್ ವಾದ, ವಿವಾದವನ್ನು ಗಮನಿಸಿದ್ದೇನೆ. ಅವರು ಆಧಾರವಿಲ್ಲದೆ ಮಾತನಾಡುವುದಿಲ್ಲ ಎಂಬುದನ್ನು ಅವರನ್ನು ಟೀಕಿಸುವವರು ತಿಳಿದಿರಲಿ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಎಚ್.ಡಿ.ದೇವೇಗೌಡರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾರಿಗೂ ಅಷ್ಟು ಸುಲಭವಾಗಿ ಅರ್ಥವಾಗುವುದಿಲ್ಲ. ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭವೂ ಅಲ್ಲ ಎಂದರು.