Advertisement
ರವಿವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹೇಮಂತ್ ಸೊರೇನ್, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ 28 ರಂದು ಪದ ಗ್ರಹಣ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನಾ ಪಕ್ಷದ ಕಚೇರಿಯಲ್ಲಿ ನಡೆದ ಜೆಎಂಎಂ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಹೇಮಂತ್ ಸೊರೆನ್ ರನ್ನು ನೂತನ ಶಾಸಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇತ್ತೀಚಿಗೆ ನಡೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೆನ್ರ ಪಕ್ಷ 34, ಕಾಂಗ್ರೆಸ್ 16, ಆರ್ ಜೆಡಿ 4 ಮತ್ತು ಸಿಪಿಐಎಂಎಲ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿ 81 ಸ್ಥಾನಗಳ ವಿಧಾನಸಭೆಯಲ್ಲಿ 56 ಸ್ಥಾನಗಳ ಗೆಲ್ಲುವ ಮೂಲಕ ಎರಡನೇ ಅವಧಿಯಲ್ಲೂ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಕೂಟದ ಸರ್ಕಾರ ರಚಿಸುವಲ್ಲಿ ಹಾದಿ ಸುಗಮವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು 21 ಸ್ಥಾನಗಳ ಗಳಿಸಿದೆ.
Related Articles
ನ.28ರಂದು ನಡೆಯುವ ಅದ್ದೂರಿ ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿ ವಿರೋಧ ಪಕ್ಷದ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
Advertisement