ನವದೆಹಲಿ:ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಹದಿನೇಳು ಮಂದಿ ಅತ್ಯಾಚಾರ ಎಸಗಿರುವ ಘಟನೆ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ(ಎನ್ ಸಿಡಬ್ಲ್ಯು) ಗುರುವಾರ (ಡಿಸೆಂಬರ್ 10, 2020) ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಜಾರ್ಖಂಡ್ ಪೊಲೀಸರಿಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ವರದಿಯ ಪ್ರಕಾರ, ಮಂಗಳವಾರ ರಾತ್ರಿ ಮಾರ್ಕೆಟ್ ನಿಂದ ದಂಪತಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಗಂಡನನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡು, ಪತ್ನಿ ಮೇಲೆ 17 ಮಂದಿ ಅತ್ಯಾಚಾರ ಎಸಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳು ಮದ್ಯಪಾನ ಮಾಡಿರುವುದಾಗಿ ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಬಗ್ಗೆ ಸ್ವಯಂ ಆಗಿ ಪ್ರಕರಣದ ಪೂರ್ಣ ಮಾಹಿತಿ ಕಲೆಹಾಕಿ ವರದಿ ನೀಡಬೇಕಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಹೇಳಿದೆ.
ಇದನ್ನೂ ಓದಿ:ಸೌರವ್ ಗಂಗೂಲಿ, ಜಯ್ ಶಾ ಅಧಿಕಾರ ಮುಂದುರಿಕೆ: ಸುಪ್ರೀಂ ನಲ್ಲಿ ವಿಚಾರಣೆ ಆರಂಭ
ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಬೇಕೆಂಬ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನೀಡಿರುವ ಮಾರ್ಗಸೂಚಿಯಂತೆ ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.