Advertisement

ಜಿಂದಾಲ್‌ಗೆ ಸರಕಾರಿ ಜಮೀನು ಪ್ರಶ್ನಿಸಿದ್ದ ಅರ್ಜಿ ವಜಾ

10:29 PM Nov 08, 2021 | Team Udayavani |

ಬೆಂಗಳೂರು: ಜಿಂದಾಲ್‌ ಕಂಪೆನಿಗೆ 3,667 ಎಕರೆ ಸರಕಾರಿ ಜಮೀನನ್ನು ಪರಭಾರೆ ಮಾಡಲು ಸಚಿವ ಸಂಪುಟದಲ್ಲಿ ಕೈಗೊಂಡಿದ್ದ ನಿರ್ಣಯಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಬೆಂಗಳೂರಿನ ಕೆ.ಎ. ಪಾಲ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಇಡೀ ಪ್ರಕರಣ ಮುಖ್ಯಮಂತ್ರಿಗಳ ಮುಂದೆ ಮರು ಪರಿಶೀಲನೆಯಲ್ಲಿದೆ ಎಂದು ಸರಕಾರಿ ವಕೀಲರು ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿತು.

ವಿಚಾರಣೆ ವೇಳೆ ಸರಕಾರಿ ಪರ ವಕೀಲರು ವಾದ ಮಂಡಿಸಿ, ಜಮೀನು ಪರಭಾರೆ ಕುರಿತು 2021ರ ಎ.26ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ನಿರ್ಧಾರವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.ಸದ್ಯ ಈ ವಿಚಾರವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಜಿಂದಾಲ್‌ ಪರ ವಕೀಲರು ಈ ವಾದವನ್ನು ಸಮರ್ಥಿಸಿದರು.ಅರ್ಜಿದಾರರ ಪರ ವಕೀಲರು, ತಮ್ಮ ಹಿರಿಯ ವಕೀಲರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಅರ್ಜಿ ಸಂಬಂಧ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ಬೇಕಿದೆ. ಹಾಗಾಗಿ, ವಿಚಾರಣೆ ಮುಂದೂಡಬೇಕು ಎಂದು ಕೋರಿದರಲ್ಲದೆ, ಅರ್ಜಿ ಆಕ್ಷೇಪಣೆ ಸಲ್ಲಿಸುವಂತೆ ಕಳೆದ ಬಾರಿ ಸರಕಾರಕ್ಕೆ ಹೈಕೋರ್ಟ್‌ ಸೂಚಿಸಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.

Advertisement

ಇದನ್ನೂ ಓದಿ:ರಫೇಲ್‌ ಕಿಕ್‌ಬ್ಯಾಕ್‌ ತನಿಖೆ ನಡೆಸದಿರಲು ಸಿಬಿಐ ನಿರ್ಧಾರ: ಹೊಸ ವರದಿಯಲ್ಲಿ ಆರೋಪ

ಅದಕ್ಕೆ ಒಪ್ಪದ ನ್ಯಾಯಪೀಠ, ಅರ್ಜಿಯನ್ನು ವಿಚಾರಣೆ ಮುಂದೂಡಲಾಗದು. ಸರಕಾರಿ ವಕೀಲರ ಹೇಳಿಕೆ ಪರಿಗಣಿಸಿದರೆ ಅರ್ಜಿಯ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.

ಹಿಂದಿನ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರವು ಜಿಂದಾಲ್‌ ಕಂಪನಿಗೆ ಸರ್ಕಾರಿ ಜಮೀನು ಪರಾಬಾರೆ ಮಾಡಲು ತೀರ್ಮಾನಿಸಿತ್ತು. ಆದರೆ, ಸದ್ಯ ಇಡೀ ಪ್ರಕರಣವು ಹಾಲಿ ಮುಖ್ಯಮಂತ್ರಿಗಳ ಮುಂದೆ ಮರು ಪರಿಶೀಲನೆಯಲ್ಲಿದೆ. ಆದ್ದರಿಂದ ಅರ್ಜಿ ವಿಚಾರಣೆ ಮುಂದುವರಿಸಲು ಅಗತ್ಯವಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು.

ಹಿನ್ನೆಲೆ
ವಿಜಯನಗರ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಅಂದಾಜು 3,667 ಎಕರೆ ಭೂಮಿಯನ್ನು ಜಿಂದಾಲ್‌ ಸಂಸ್ಥೆಗೆ ಪರಭಾರೆ ಮಾಡಲು 2021ರ ಏ.26ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ರದ್ದುಪಡಿಸಬೇಕು. ಜಮೀನು ಪರಭಾರೆ ನಿರ್ಧಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್‌ ವತಿಯಿಂದ ಸ್ವತಂತ್ರ ಸಂಸ್ಥೆಯೊಂದನ್ನು ನೇಮಿಸಬೇಕು. ಆ ಸಂಸ್ಥೆಯಿಂದ ವರದಿ ತರಿಸಿಕೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದರು.

2021ರ ಜೂ.15ರಂದು ನಡೆದ ಅರ್ಜಿ ವಿಚಾರಣೆ ವೇಳೆ ಜಿಂದಾಲ್‌ ಕಂಪನಿಗೆ ಸರ್ಕಾರಿ ಜಮೀನು ಮಂಜೂರು ಮಾಡುವ ಸಂಬಂಧ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ, ಸಂಪುಟದ ತೀರ್ಮಾನ ಅಂತಿಮಗೊಂಡಿಲ್ಲ. ಸದ್ಯಕ್ಕೆ ಆ ನಿರ್ಧಾರವನ್ನು ಜಾರಿಗೊಳಿಸದಿರಲು ತೀರ್ಮಾನಿಸಲಾಗಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದರು. ಅದನ್ನು ಪರಿಗಣಿಸಿದ ಹೈಕೋರ್ಟ್‌, ಜಿಂದಲ್‌ ಸಂಸ್ಥೆಗೆ 3,667 ಎಕರೆ ಸರ್ಕಾರಿ ಜಮೀನು ಪರಭಾರೆ ಮಾಡುವ ಸಂಬಂಧ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ಆಧರಿಸಿ ಸರ್ಕಾರ ಕೈಗೊಳ್ಳುವ ಯಾವುದೇ ಕ್ರಮ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತರ ಆದೇಶಿಸಿತ್ತು. ಜತೆಗೆ, ಸರ್ಕಾರಿ ಜಮೀನಿನ ಪರಭಾರೆ ಸಂಬಂಧ ಸ್ಪಷ್ಟ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next