ನವದೆಹಲಿ: ಜಮ್ಮು-ಕಾಶ್ಮೀರದ ಉಧಾಂಪುರ್ ನ ಸ್ಲಾಥಿಯಾ ಚೌಕ್ ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಬುಧವಾರ (ಮಾರ್ಚ್ 09) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಅಗ್ರಸ್ಥಾನಕ್ಕೇರಿದ ಜಡೇಜಾ: ವಿರಾಟ್, ಪಂತ್ ಗೂ ಭಡ್ತಿ; ರೋಹಿತ್ ಗೆ ಹಿನ್ನಡೆ
ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಂಬ್ ಸ್ಫೋಟಕ್ಕೆ ಮೂಲ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.
ಉಧಾಂಪುರ್ ನ ತಹಸೀಲ್ದಾರ್ ಕಚೇರಿ ಸಮೀಪ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಜಿಲ್ಲಾಧಿಕಾರಿ ಇಂದು ಚಿಬ್ ಅವರ ನಿರಂತರ ಸಂಪರ್ಕದಲ್ಲಿದ್ದು, ಪ್ರತಿಯೊಂದು ಮಾಹಿತಿ ಪಡೆಯುತ್ತಿರುವುದಾಗಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ.
ಸ್ಫೋಟದಲ್ಲಿ ಬೀದಿ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಬಲಿಪಶುಗಳಾಗಿದ್ದು, ಘಟನೆಯಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಸ್ಫೋಟಕ್ಕೆ ಉಗ್ರರು ಕಾರಣರೇ ಅಥವಾ ಇನ್ನಿತರ ಯಾವುದಾದರು ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈವರೆಗೂ ಸ್ಫೋಟದ ಹೊಣೆಯನ್ನು ಯಾವುದೇ ಭಯೋತ್ಪಾದಕ ಸಂಘಟನೆಗಳು ಹೊತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.