ನವದೆಹಲಿ: ಪ್ರಸಿದ್ಧ ಅಮರನಾಥ್ ಯಾತ್ರೆಯ ನಂತರ ಬಹು ನಿರೀಕ್ಷೆಯ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಆಗಸ್ಟ್ 19ರಂದು ಅಮರನಾಥ್ ಯಾತ್ರೆ ಮುಕ್ತಾಯಗೊಳ್ಳಲಿದೆ.
ಇದನ್ನೂ ಓದಿ:ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವಂತೆ ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಿಗೆ ಸೂಚನೆ ನೀಡಿರುವುದಾಗಿ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿದೆ.
ಗುರುವಾರ ತಡರಾತ್ರಿ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಆರೋಗ್ಯ ಸಚಿವ ಸಭೆ ನಡೆಸಿದ್ದು, ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಸ್ಪರ್ಧಿಸಲಿದ್ದು, ಕೂಡಲೇ ಚುನಾವಣೆಗೆ ಸಿದ್ಧರಾಗುವಂತೆ ಬಿಜೆಪಿ ರಾಜ್ಯ ಘಟಕದ ಮುಖಂಡರಿಗೆ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ.
2019ರ ಆಗಸ್ಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮುನ್ನ 2018ರ ನವೆಂಬರ್ ನಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಲಾಗಿತ್ತು. ನಂತರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಇಬ್ಭಾಗ ಮಾಡಲಾಗಿತ್ತು.
ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಹೈಕಮಾಂಡ್ ಈಗಾಗಲೇ ರಾಜ್ಯದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ. ಅಲ್ಲದೇ ಸಮಾನ ಮನಸ್ಸಿನ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆ ಇರಬಹುದು ಎಂದು ಮೂಲಗಳು ತಿಳಿಸಿವೆ.
ಮುಂಬರುವ ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಘೋಷಿಸುವುದಿಲ್ಲ ಎಂದು ಹೇಳಿದೆ. ಶೀಘ್ರದಲ್ಲೇ ರಾಜ್ಯದಲ್ಲಿ ಜನರನ್ನು ಸಂಪರ್ಕಿಸುವ ಸಭೆ, ಸಮಾರಂಭಗಳು ನಡೆಯಲಿದೆ ಎಂದು ಬಿಜೆಪಿ ತಿಳಿಸಿದೆ.