ನವದೆಹಲಿ: ರಾಜ್ಯದ ಖಾಸಗಿ ಕಂಪನಿಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75ರಷ್ಟು ಮೀಸಲಾತಿ ಮಸೂದೆಗೆ ಕರ್ನಾಟಕ ಸರ್ಕಾರ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ಕರ್ನಾಟಕದ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಖಾಸಗಿ ವಲಯದ ಉದ್ಯೋಗಕ್ಕಾಗಿ ಒಬಿಸಿ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ತಮ್ಮ ಪಕ್ಷ ಒತ್ತಾಯಿಸುತ್ತದೆ ಎಂದು ಅಠಾವಳೆ ಬುಧವಾರ (ಜುಲೈ 17) ತಿಳಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಎಸ್ ಸಿ, ಎಸ್ ಟಿಯ ಹಲವಾರು ಮಂದಿ ಇದ್ದಿರಬಹುದು, ಆದರೆ ಅವರಿಗೆ ಮೀಸಲಾತಿ ಇಲ್ಲ. ಶೀಘ್ರದಲ್ಲೇ ಸರ್ಕಾರಿ ವಲಯ ಕೂಡಾ ಮುಂದೆ ಖಾಸಗಿಯಾಬಹುದು ಎಂದು ಅಠಾವಳೆ ಹೇಳಿದರು.
ಕರ್ನಾಟಕ ಸರ್ಕಾರ ಕನ್ನಡಿಗರಿಗೆ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ನೀಡಬೇಕೆಂಬ ವಿಧೇಯಕಕ್ಕೆ ಹಸಿರು ನಿಶಾನೆ ತೋರಿಸಿದ ನಂತರ ಅಠಾವಳೆ ಈ ಹೇಳಿಕೆಯನ್ನು ನೀಡಿದ್ದಾರೆ. ಇಂದು ಬೆಳಗ್ಗೆ ಖಾಸಗಿ ಕಂಪನಿಯಲ್ಲಿನ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಮಣಿಪಾಲ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮೋಹನದಾಸ್ ಪೈ, ಬಯೋಕಾನ್ ನ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವು ಉದ್ಯಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಅದಾದ ನಂತರ ಸಿಎಂ ಸಿದ್ದರಾಮಯ್ಯನವರು ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದರು.