ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಯುಪಿ ಸರ್ಕಾರದಿಂದ ಬಂಧನಕ್ಕೊಳಗಾಗಿದ್ದ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ಮೂರು ದಿನಗಳೊಳಗೆ ಕಪ್ಪನ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಹೇಳಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರು, ಪತ್ರಕರ್ತರು ಮುಂದಿನ ಆರು ವಾರಗಳ ಕಾಲ ದೆಹಲಿಯಲ್ಲಿ ಮತ್ತು ನಂತರ ಕೇರಳದಲ್ಲಿ ಪೊಲೀಸರಿಗೆ ವರದಿ ಮಾಡುತ್ತಾರೆ ಎಂದು ಹೇಳಿದ್ದಾರೆ.
19 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರದ ಬಗ್ಗೆ ವರದಿ ಮಾಡಲು ಉತ್ತರ ಪ್ರದೇಶದ ಹತ್ರಾಸ್‌ಗೆ ತೆರಳುತ್ತಿದ್ದಾಗ ಬಂಧಿಸಲ್ಪಟ್ಟ ಸಿದ್ದಿಕ್ ಕಪ್ಪನ್ 2020 ರಿಂದ ಜೈಲಿನಲ್ಲಿದ್ದರು. ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಆರೋಪ ಹೊರಿಸಲಾಗಿತ್ತು.
ಹತ್ರಾಸ್ ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದು, ಕಪ್ಪನ್ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಕಪ್ಪನ್ ತಾನು ನಿರಪರಾಧಿ ಎಂದು ಸಮರ್ಥಿಸಿಕೊಂಡಿದ್ದರು.