Advertisement

ಪತ್ರಕರ್ತರ ಸಂಘದ ಪದಾಧಿಕಾರಿಗಳ ಸೇವಾ ಸ್ವೀಕಾರ

02:23 PM Jun 06, 2022 | Team Udayavani |

ಹಾವೇರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕದ ಪತ್ರಿಕಾ ಭವನದ ಮೇಲ್ಭಾಗದಲ್ಲಿ ಸಭಾಂಗಣ, ಸಂಪರ್ಕ ರಸ್ತೆ ಸೇರಿದಂತೆ ಪತ್ರಿಕಾ ಭವನದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ರವಿವಾರ ಏರ್ಪಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ 2022-25ನೇ ಸಾಲಿನ ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಪದಾಧಿಕಾರಿಗಳು ಸಂಘದ ಅಭಿವೃದ್ಧಿಗಾಗಿ ಶ್ರಮಿಸುವ ಮೂಲಕ ಉತ್ತಮ ಸೇವೆ ಸಲ್ಲಿಸಬೇಕು. ಪತ್ರಿಕಾ ಭವನ ಸಂಪರ್ಕಿಸುವ ರಸ್ತೆ, ಮೇಲ್ಛಾವಣಿಯಲ್ಲಿ ಸಭಾಂಗಣ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲು ಬದ್ಧನಾಗಿದ್ದೇನೆ. ನಮ್ಮ ಜಿಲ್ಲೆಯವರೇ ಮುಖ್ಯಮಂತ್ರಿಗಳಾಗಿದ್ದು, ನೂತನ ಪದಾಧಿಕಾರಿಗಳು ಹಾಗೂ ರಾಜ್ಯಾಧ್ಯಕ್ಷರನ್ನು ಒಳಗೊಂಡ ನಿಯೋಗದೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪತ್ರಿಕಾ ಭವನದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಮನವರಿಕೆ ಮಾಡೋಣ ಎಂದರು.

ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ಕಾರ್ಯನಿರತ ಪತ್ರಕರ್ತರ ಸಂಘ ಎಲ್ಲ ಪತ್ರಕರ್ತರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಮಸ್ಯೆಗಳನ್ನು ಬಗೆಹರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಹಿಂದೆ ಜಿಲ್ಲೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಮೃತರಾದ ಎಂ.ಸಿ. ಮಂಜುನಾಥ, ಗಂಗಾಧರ ಹೂಗಾರ ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಸಂಘ ಶ್ರಮಿಸಿದ್ದು, ರಾಮು ಮುದಿಗೌಡ್ರ ಕುಟುಂಬಕ್ಕೆ ಪರಿಹಾರ ಕೊಡಿಸಲು ಪ್ರಯತ್ನ ನಡೆಸಿದೆ ಎಂದು ಹೇಳಿದರು.

ಸಂಜೀವ ಕುಮಾರ ನೀರಲಗಿ ಮಾತನಾಡಿ, ಪತ್ರಕರ್ತರು ಭೂಲೋಕದ ನಾರದರು. ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಜನರಿಗೆ ತಿಳಿಸುವ ಮೂಲಕ ಸಮಾಜದ ಮುಖ್ಯ ಪರಿವರ್ತಕರಾಗಿ ನಿರಂತರ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ನಾಗರಾಜ ಕುರವತ್ತೇರ ಮಾತನಾಡಿ, ಪತ್ರಿಕಾ ಭವನದ ಅಭಿವೃದ್ಧಿಗೆ ನಿರಂತರ ಶ್ರಮಿಸಲಾಗುತ್ತಿದ್ದು, ಪತ್ರಿಕಾ ಭವನಕ್ಕೆ ಹೊಸ ಕಳೆ ನೀಡಲಾಗಿದೆ. ಪತ್ರಕರ್ತರ ಸಭೆ, ಸಮಾರಂಭಕ್ಕೆ ಪತ್ರಿಕಾ ಭವನದ ಮೇಲ್ಭಾಗದಲ್ಲಿ ಸಭಾಂಗಣ, ವಾಹನಗಳಿಗೆ ಪಾರ್ಕಿಂಗ್‌ ವ್ಯವಸ್ಥೆ, ಸುಸಜ್ಜಿತ ಕೊಠಡಿಗಳ ನಿರ್ಮಾಣ ಅವಶ್ಯವಿದ್ದು, ಅಗತ್ಯ ಅನುದಾನ ನೀಡುವ ಮೂಲಕ ಪತ್ರಿಕಾ ಭವನದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ದಾವಣಗೆರೆ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ| ಶಿವಕುಮಾರ ಕಣಸೋಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪರಸಪ್ಪ ಸತ್ಯಪ್ಪನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕೇರಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. ಪತ್ರಕರ್ತ ಕಿರಣ ಹೂಗಾರ ನಿರೂಪಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ನಾರಾಯಣ ಹೆಗಡೆ ಸ್ವಾಗತಿಸಿದರು.

ಪತ್ರಕರ್ತರ ಭವನ ದೇವಸ್ಥಾನಕ್ಕೆ ಸಮಾನವಾಗಿದ್ದು, ಇದು ಯಾರೊಬ್ಬರ ಸ್ವತ್ತು ಅಲ್ಲ, ಪತ್ರಕರ್ತರ ಆಸ್ತಿ. ಎಲ್ಲರನ್ನು ಸಮಾನವಾಗಿ ನೋಡುವ ಸ್ಥಳವಾಗಿದ್ದು, ಇಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಅರ್ಥಪೂಣವಾಗಿದೆ. ಪ್ರತಿಯೊಬ್ಬರು ಸಂಘದ ಅಭಿವೃದ್ಧಿಗಾಗಿ ಪ್ರಮಾಣಿಕವಾಗಿ ಶ್ರಮಿಸುವ ಮೂಲಕ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕು.   –ಶಿವಾನಂದ ತಗಡೂರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next