ಗೌರಿಬಿದನೂರು: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಮಂಚೇನಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮವನ್ನು ಜಿಪಂ ಸಿಇಒ ಫೌಝೀಯಾ ತರುನ್ನುಮ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಪಂ ಸಿಇಒ, ಮಕ್ಕಳು ಜಂತುಹುಳು ಸೋಂಕಿನಿಂದಾಗಿ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ. ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ರಕ್ತಹೀನತೆ, ಪೌಷ್ಟಿಕಾಂಶದ ಕೊರತೆ, ಹಸಿವಾಗದಿರುವುದು, ನಿಶಕ್ತಿ ಮತ್ತು ಹೊಟ್ಟೆನೋವು, ವಾಕರಿಕೆ, ವಾಂತಿ, ಅತಿಸಾರ, ತೂಕ ಕಡಿಮೆಯಾಗುವುದು ಇಂತಹ ಸಮಸ್ಯೆಗಳಾದರೆ ವೈದ್ಯರಿಗೆ ತೋರಿಸಬೇಕು ಎಂದರು.
ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಜಂತುಹುಳ ನಾಶಕ ಮಾತ್ರೆಗಳನು ° ಉಚಿತವಾಗಿ ನೀಡಲಾಗುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಒಂದು ವರ್ಷ, ಐದು ವರ್ಷ ವಯಸ್ಸಿನ ಮಕ್ಕಳಿಗೆ ಈ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತಿದ್ದು, 6ರಿಂದ 19 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ ನೀಡಲಾಗುತ್ತದೆ. ದಾಖಲಾಗದೆ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.
ಅಲ್ಬೆಂಡಾಜೋಲ್ ಮಾತ್ರೆ ಮಕ್ಕಳಿಗೆ ಸುರಕ್ಷಿತವಾಗಿರುವ ಔಷಧವಾಗಿದೆ. ಈ ಮಾತ್ರೆಯನ್ನು ಮಗುವಿಗೆ ಶಾಲೆ ಅಥವಾ ಅಂಗನವಾಡಿ ಕೇಂದ್ರದಲ್ಲಿ ಮಾತ್ರ ನೀಡಬೇಕು ಹಾಗೂ ಮಗು ಅಥವಾ ಪಾಲಕರಿಗೆ ಮನೆಗೆ ತೆಗೆದುಕೊಂಡು ಹೋಗಲು ನೀಡಬಾರದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ.ಯೋಗೀಶ್‌ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಚನ್ನಕೇಶವರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಒ.ರತ್ನಮ್ಮ ಹಾಗೂ ಸಿಬ್ಬಂದಿ, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಸಿಬ್ಬಂದಿ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕೇಂದ್ರ ಹಿರಿಯ ಸಹಾಯಕಿ ಸೇರಿದಂತೆ ಉಪಸ್ಥಿತರಿದ್ದರು.