ಗಂಗಾವತಿ: ಇಲ್ಲಿಯ ನ್ಯಾಯಾಧೀಶೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಕೋಶದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ಸರಳತೆ ಮೆರೆದಿದ್ದಾರೆ. ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅನಿತಾ ಜಿ. ಅವರಿಗೆ ಹಲವು ದಿನಗಳಿಂದ ಗರ್ಭಕೋಶದ ತೊಂದರೆಯಾಗಿತ್ತು.
ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ಇತ್ತೀಚೆಗೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೂ ಗುಣಮುಖರಾಗದೆ ಇದ್ದಾಗ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಕೋಶದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ಅವಕಾಶವಿದ್ದು, ತಾವು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶೆ ಅನಿತಾ ಜಿ. ಎರಡು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಶುಕ್ರವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಆರೋಗ್ಯವಾಗಿದ್ದಾರೆ.
ಅನಾರೋಗ್ಯದ ಸಂದರ್ಭದಲ್ಲಿ ಹಣವುಳ್ಳವರು ಮತ್ತು ಇಲ್ಲದವರು ಸಾಲ ಮಾಡಿಯಾದರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶವಿದ್ದರೂ ಸ್ಥಳೀಯ ನ್ಯಾಯಾಧೀಶೆ ಅನಿತಾ ಜಿ. ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಗಂಗಾವತಿ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ಮತ್ತು ಸ್ವಚ್ಛತೆಯಲ್ಲಿ ಪ್ರಶಸ್ತಿ ಪಡೆದಿದೆ. ಇಲ್ಲಿ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಯಂತ್ರೋಪಕರ ಣಗಳಿದ್ದು, ತಜ್ಞವೈದ್ಯರೂ ಇದ್ದಾರೆ. ಸಾಲ ಮಾಡಿ ಖಾಸಗಿ ಆಸ್ಪತ್ರೆಯವರಿಗೆ ದುಡ್ಡು ಕೊಡುವ ಬದಲಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು.
-ಅನಿತಾ ಜಿ., ಹಿರಿಯ ಸಿವಿಲ್ ನ್ಯಾಯಾಧೀಶರು
* ಕೆ.ನಿಂಗಜ್ಜ