ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂತ್ರಸ್ಥ ಯುವತಿ ಲೀಷಾಗೆ ಸರ್ಕಾರಿ ನೌಕರಿ ಹಾಗೂ ಪರಿಹಾರ ಕಲ್ಪಿಸುವ ಸಂಬಂಧ ನ್ಯಾಯಾಲಯದ ಆದೇಶ ಪಾಲಿಸದ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್ ಸೋಮವಾರ ನ್ಯಾಯಾಂಗ ನೋಟಿಸ್ ಜಾರಿಗೊಳಿಸಿದೆ.
2013ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಅಂಗವೈಕಲ್ಯಕ್ಕೆ ತುತ್ತಾಗಿರುವ ಲೀಷಾ, ಶೇ.50ರಿಂದ 70 ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ್ದ ಹೈಕೋರ್ಟ್, 3 ತಿಂಗಳಲ್ಲಿ ಲೀಷಾಗೆ ಉದ್ಯೋಗ ಕಲ್ಪಿಸುವಂತೆ ರಾಜ್ಯ ಸರ್ಕಾರ ಹಾಗೂ 4 ತಿಂಗಳಲ್ಲಿ ಸೂಕ್ತ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ 2016ರ ಅ.17ರಂದು ಆದೇಶಿಸಿತ್ತು.
ಆದರೆ 9 ತಿಂಗಳು ಕಳೆದರೂ ಆದೇಶ ಪಾಲನೆಯಾಗದ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಯಂತ್ ಪಟೇಲ್ ಹಾಗೂ ನ್ಯಾ. ಎನ್.ಕೆ.ಸುಧೀಂದ್ರ ರಾವ್ ಅವರಿದ್ದ ಪೀಠ, ರಾಜ್ಯ ಹಾಗೂ ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು.
ಅರ್ಜಿದಾರ ಪರ ವಕೀಲರು ವಾದಿಸಿ, ನ್ಯಾಯಾಲಯದ ಆದೇಶದಂತೆ ಉದ್ಯೋಗ ನೀಡುವ ಸಂಬಂಧ ಲೀಷಾ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದರು. ಲೀಷಾ, ಮನವಿ ಸ್ವೀಕರಿಸಿದ್ದ ಮುಖ್ಯಮಂತ್ರಿಗಳು ಸರ್ಕಾರಿ ನೌಕರಿ ನೀಡುವ ವಿಚಾರವನ್ನು ಸಚಿವ ಸಂಪುಟದ ಮುಂದಿಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರೂ ಪ್ರಯೋಜನವಾಗಿಲ್ಲ. ಅದೇ ರೀತಿ ಲೀಷಾ ಅವರಿಗೆ ಎಂಟಕ್ಕೂ ಅಧಿಕ ಶಸ್ತ್ರ ಚಿಕಿತ್ಸೆಗಳಾಗಿದ್ದು, ಅವರ ತಂದೆ ಚಿಕಿತ್ಸೆಗಾಗಿ 25 ಲಕ್ಷಕ್ಕೂ ಅಧಿಕ ಹಣ ವೆಚ್ಚ ಮಾಡಿದ್ದಾರೆ.
ಆದರೆ ಕೇಂದ್ರ ಸರ್ಕಾರ ಕೇವಲ 3 ಲಕ್ಷ ರೂ ಪರಿಹಾರ ನೀಡಿದೆ. ಅರ್ಜಿದಾರರ ವಯಸ್ಸು ಹಾಗೂ ಗಾಯದ ಪ್ರಮಾಣವನ್ನು ಪರಿಗಣಿಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಈ ಕುರಿತು ಮನವಿ ಮಾಡಿದ್ದರೂ ಕೇಂದ್ರ ಗೃಹ ಇಲಾಖೆ ಸ್ಪಂದಿಸುತ್ತಿಲ್ಲ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಗೃಹ ಕಾರ್ಯದರ್ಶಿಗಳ ಮೇಲೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೊಳ್ಳುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು.