ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಒಕಾ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾ.ಒಕಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.
ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಆಧರಿಸಿ ಮುಂಬೈ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಯಾಗಿದ್ದ ಅಭಯ್ ಶ್ರೀನಿವಾಸ್ ಒಕಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಏ.30ರಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ರಾಷ್ಟ್ರಪತಿಯವರು ಅಂಕಿತ ಹಾಕಿದ್ದರು.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದನ್ನೋತಿ ನೀಡಲಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿದ್ದ ಎಲ್. ನಾರಾಯಣಸ್ವಾಮಿಯವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಈಗ ನ್ಯಾ.ಒಕಾ ಕಾಯಂ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ, ಹೈಕೋರ್ಟ್ ನ್ಯಾಯಮೂರ್ತಿಗಳು, ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ. ಡಿ.ಎಚ್.ವಘೇಲಾ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ,
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ, ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ವಿ. ಶ್ರೀಶಾನಂದ, ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.