ಕೋಲಾರ: ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಪ್ರತಿ ತಿಂಗಳ ಪಿಂಚಣಿಯ ಶೇ.30 ಭಾಗವನ್ನು ಕೋವಿಡ್ 19 ಪರಿಹಾರ ನಿಧಿಗೆ ಸಲ್ಲಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ತಮ್ಮ ಒಪ್ಪಿಗೆ ಪತ್ರವನ್ನು ಸಲ್ಲಿಸಿದರು.
ದೇಶದಲ್ಲಿಯೇ ಹೀಗೆ ಮಾಜಿ ಸಚಿವ ಹಾಗೂ ಸಂಸದರೊಬ್ಬರು ತಮಗೆ ಬರುತ್ತಿರುವ ಪಿಂಚಣಿಯನ್ನು ಸಿಎಂ ಅಥವಾ ಪಿಎಂ ಪರಿಹಾರ ನಿಧಿಗೆ ಸಲ್ಲಿಸಿರುವುದು ಇದೇ ಮೊದಲು ಎನ್ನಲಾಗಿದೆ.
ಕರ್ನಾಟಕ ರಾಜ್ಯ ಸರಕಾರವು ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಬಡ ಕುಟುಂಬಗಳಿಗೆ ಪಡಿತರ ವ್ಯವಸ್ಥೆ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸುತ್ತಿರುವುದಕ್ಕೆ ಕೆ.ಎಚ್.ಮುನಿಯಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಯಲು ಸರ್ವ ಪಕ್ಷಗಳೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಶಾಸಕ ಕೆ.ವೈ.ನಂಜೇಗೌಡ, ರೂಪಕಲಾ ಶಶಿಧರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಖಜಾಂಚಿ ರಾಮಪ್ರಸಾದ್, ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಕಾರ್ಯದರ್ಶಿ ಕುಮಾರ್, ಜಿಲ್ಲಾ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್ ಇತರರು ಹಾಜರಿದ್ದರು.