ಕಾಪು : ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಪು ಕ್ಷೇತ್ರಕ್ಕೆ ನೀಡಲ್ಪಟ್ಟ ಮೂರು ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಬುಧವಾರ ಕಾಪುವಿನಲ್ಲಿ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು ಶಾಸಕರೊಬ್ಬರು ತಮಗೆ ಬರುವ 2 ಕೋಟಿ ರೂಪಾಯಿ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂಪಾಯಿ ಅನುದಾನವನ್ನು ಕ್ಷೇತ್ರದ ಜನತೆಯ ಆರೋಗ್ಯದ ದೃಷ್ಟಿಯಿಂದ ಆ್ಯಂಬುಲೆನ್ಸ್ ಸೇವೆಗಾಗಿ ಮೀಸಲಿಟ್ಟಿರುವುದು ರಾಜ್ಯದಲ್ಲೇ ಪ್ರಥಮದ್ದಾದ ಸಾಧನೆಯಾಗಿದೆ. ಈ ಮೂಲಕವೂ ಪ್ರದೇಶಾಭಿವೃದ್ಧಿ ನಿಧಿಯನ್ನು ಬಳಸಿಕೊಳ್ಳಬಹುದು, ಜನರ ಆರೋಗದಯದ ಸೇವೆಗೆ ಸ್ಪಂಧಿಸಬಹುದು ಎನ್ನುವುದನ್ನು ತೋರಿಸಿಕೊಡುವ ಮೂಲಕ ಶಾಸಕ ಲಾಲಾಜಿ ಮೆಂಡನ್ ಅವರು ರಾಜ್ಯಕ್ಕೇ ಮಾದತಿಯಾಗಿದ್ದಾರೆ ಎಂದರು.
ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಪು ಕ್ಷೇತ್ರದ ಕಾಪು, ಹಿರಿಯಡಕ ಮತ್ತು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜನರ ಸೇವೆಗಾಗಿ ಆ್ಯಂಬುಲೆನ್ಸ್ ಗಳನ್ನು ಒದಗಿಸಲಾಗಿದೆ. ಈ ಸೇವೆಯ ಮೂಲಕ ಜನರ ಜೀವ ಮತ್ತು ಜೀವನವನ್ನು ಉಳಿಸುವ ಪ್ರಯತ್ನ ನಡೆಯುತ್ತಿದೆ ಎಂದರು.
ಇದನ್ನೂ ಓದಿ :ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ವಿಚಾರದಲ್ಲೂ ಅನ್ಯಾಯ: ರಾಜುಗೌಡ ಅಸಮಾಧಾನ
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಆರೋಗ್ಯ ಇಲಾಖೆಯ ನಿರ್ದೇಶಕ ಡಾ. ಓಂ ಪ್ರಕಾಶ್ ಪಾಟೀಲ್, ವಿಶೇಷ ಅಧಿಕಾರಿ ಶ್ರೀನಿವಾಸ್, ಡಿಎಚ್ಒ ನಾಗಭೂಷಣ್ ಉಡುಪ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಬಿಜೆಪಿ ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಶೀಲಾ ಕೆ. ಶೆಟ್ಟಿ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ವೀಣಾ ಶೆಟ್ಟಿ ಕಟಪಾಡಿ, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರ್ವೇಗಾರ್, ವಿವಿಧ ಗ್ರಾ.ಪಂ. ಅಧ್ಯಕ್ಷರುಗಳು, ಮಾಜಿ ಮತ್ತು ಹಾಲಿ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು.
ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.