ಕಲಬುರಗಿ: ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರಾಗಿ ಶುಕ್ರವಾರ ಅವಿರೋಧ ಆಯ್ಕೆಯಾದರು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿ ನಿಯಮ 1993ರ ಪ್ರಕರಣ 311 ಪ್ರಕಾರ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರ ಆಯ್ಕೆಗೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.
ಯೋಜನಾ ಸಮಿತಿ ಅಧ್ಯಕ್ಷರ ಆಯ್ಕೆಗೆ ಜಿಲ್ಲಾ ಪಂಚಾಯತ್ ಸದಸ್ಯರಲ್ಲಿ ಹಿರಿಯರಾದ ಕೋಡ್ಲಿ ಜಿಲ್ಲಾ ಪಂಚಾಯತ್ ಸದಸ್ಯ ದಾಮೋದರರೆಡ್ಡಿ ದೇಶಮುಖ ಯೋಜನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ನೂತನ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ಪ್ರಕ್ರಿಯೆ ಜರುಗಲು ಅವಕಾಶ ಮಾಡಿಕೊಟ್ಟರು.
ನಿಯಮಾವಳಿ ಅನ್ವಯ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರ ಹುದ್ದೆಯ ಚುನಾವಣೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ನಾಮಪತ್ರ ಸಲ್ಲಿಸಲು ಅರ್ಹರಿದ್ದರು. ಶುಕ್ರವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 10:45ರ ವರೆಗೆ ಆಸಕ್ತ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಯಿತು. ಈ ಅವ ಧಿಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ
ಸುವರ್ಣಾ ಹಣಮಂತರಾಯ ಮಲಾಜಿ ಮಾತ್ರ ನಾಮಪತ್ರವನ್ನು ಸಲ್ಲಿಸಿದರು.
ತದನಂತರ ನಾಮಪತ್ರಗಳ ಪರಿಶೀಲನೆ ಹಾಗೂ ಇನ್ನಿತರ ಕಾರ್ಯ ಪೂರ್ಣಗೊಂಡ ನಂತರ ಸುವರ್ಣಾ ಹಣಮಂತರಾಯ ಮಲಾಜಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ ಘೋಷಿಸಿದರು.
ಪ್ರಸ್ತುತ ಈ ಸಮಿತಿಗೆ ಏಳು ತಾಲೂಕು ಪಂಚಾಯತಿಗಳ ಅಧ್ಯಕ್ಷರು, ಏಳು ತಾಲೂಕುಗಳ ಓರ್ವರಂತೆ ಏಳು ಗ್ರಾಮಗಳ ಗ್ರಾಮ ಪಂಚಾಯತ್ ಅಧ್ಯಕ್ಷರು, 17 ಜಿಲ್ಲಾ ಪಂಚಾಯತ್ ಸದಸ್ಯರು, 25 ತಾಲೂಕು ಪಂಚಾಯತ್ ಸದಸ್ಯರು ಮತ ಚಲಾಯಿಸಲು ಅರ್ಹರಿರುತ್ತಾರೆ. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಇದ್ದರು. ನೂತನ ಜಿಲ್ಲಾ ಯೋಜನಾ ಸಮಿತಿಗೆ ಆಯ್ಕೆಯಾದ ಸುವರ್ಣಾ ಹಣಮಂತರಾಯ ಮಲಾಜಿ ಅವರನ್ನು ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಸಿ.ಇ.ಒ ಹೂಗುಚ್ಛ ನೀಡಿ ಶುಭ ಕೋರಿದರು.