ಕಲಬುರಗಿ: ಗುಲ್ಬರ್ಗ ವಿವಿ ಜ್ಞಾನಗಂಗೆ ಆವರಣದಲ್ಲಿ ಫೆ. 5ರಿಂದ ಮೂರು ದಿನಗಳ ಕಾಲ ನಡೆಯುವ ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಶೇ. 90ರಷ್ಟು ಪೂರ್ಣಗೊಂಡಿವೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಹಾಗೂ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಸಮ್ಮೇಳನದ ಸರ್ವ ಸಿದ್ಧತೆ ಕುರಿತು ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಸರಕಾರ 10 ಕೋಟಿ ರೂ. ಬಿಡುಗಡೆ ಮಾಡಿದೆ. ಸಮ್ಮೇಳನದ ಮುಖ್ಯ ವೇದಿಕೆ, ಪುಸ್ತಕ ಮಳಿಗೆ, ಅಡುಗೆ ವೇದಿಕೆ ಸೇರಿದಂತೆ ಇತರ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ವಿವರಿಸಿದರು.
ವಸತಿ ಹಾಗೂ ಸಾರಿಗೆ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ. 113 ಕಡೆ ವಸತಿ ಸೌಕರ್ಯ ಕಲ್ಪಿಸಲಾಗಿದೆ. ಸಮ್ಮೇಳನಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಿಗಮಕ್ಕೆ ಕೇಳಿಕೊಳ್ಳಲಾಗಿದೆ. ಅಲ್ಲದೇ ಸಮ್ಮೇಳನದ ಅಂಗವಾಗಿ ಮೂರು ದಿನ ಶಾಲೆ-ಕಾಲೇಜುಗಳಿಗೆ ರಜೆ ನೀಡಲು ಚಿಂತನೆ ನಡೆಸಲಾಗಿದೆ. ಈ ಕುರಿತು ಸೋಮವಾರ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಮ್ಮೇಳನದಲ್ಲಿ 500 ಪುಸ್ತಕ ಮಳಿಗೆ, 300 ವಾಣಿಜ್ಯ ಮಳಿಗೆಗಳಿಗೆ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟವಾಗಿರುವಂತೆ ಡಾ| ಎಸ್.ಎಂ. ಪಂಡಿತ ರಂಗಮಂದಿರದಿಂದ ನಡೆಯಲಿದೆ. ಸ್ಥಳದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಮಾತನಾಡಿ, ಸಮ್ಮೇಳನಕ್ಕೆ ಇಬ್ಬರು ಎಸ್ಪಿ, 15 ಎಸಿಪಿ, 75 ಸಿಪಿಐ, 200 ಪಿಎಸ್‌ಐ, 10 ಕೆಎಸ್ ಆರ್‌ಪಿ, 500 ಹೋಮ್‌ಗಾರ್ಡ್ಸ್, 4000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಮುಖ್ಯವಾಗಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹಾಗೂ ಸಮ್ಮೇಳನುದ್ದಕ್ಕೂ ದ್ರೋಣದ ಮೂಲಕ ಚಿತ್ರಿಕರಿಸಲಾಗುವುದು ಎಂದು ತಿಳಿಸಿದರು.