ಕಲಬುರಗಿ: ಸರ್ಕಾರಿ ಶಾಲೆಗಳ ಬದಲಿಗೆ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಗರದಲ್ಲಿ ಶನಿವಾರ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಜಾಥಾ ಹಾಗೂ ಬಹಿರಂಗ ಸಭೆ ನಡೆಸಿದರು.
ಬೆಂಗಳೂರಿನಲ್ಲಿ ರಾಜ್ಯದ ಅಂಗನವಾಡಿ ನೌಕರರು ಡಿ.10 ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಿರುವ ಹಿನ್ನೆಲೆಯಲ್ಲಿ ಪೂರಕವಾಗಿ ನಗರದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರ ಗಂಜ್ ಪ್ರದೇಶದ ಲಾಹೋಟಿ ಕಲ್ಯಾಣ ಮಂಟಪದಿಂದ ಮೆರವಣಿಗೆ ಮೂಲಕ ಜಗತ್ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು, ನಂತರ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು.
ಕೆಂಪು ಬಾವುಟ ಹಿಡಿದು, ಶಲ್ಯೆ, ಟೋಪಿ ಹಾಕಿಕೊಂಡು ಹೋರಾಟದ ಕಿಚ್ಚು ಪ್ರದರ್ಶಿಸಿದರು. ಕರ್ನಾಟಕ ರೈತ ಪ್ರಾಂತ ಸಂಘದ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಡಾ| ರಾಜಾ ಪಿ. ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.