ಕಲಬುರಗಿ: ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಶಿಕ್ಷಣ ಸುಧಾರಣೆಗೆ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆ-ಕಾಲೇಜುಗಳಿಗೆ ಮೂಲಸೌಕರ್ಯ ಒದಗಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಆಯುಕ್ತಾಲಯದ ಪ್ರಭಾರಿ ನಿರ್ದೇಶಕ ಟಿ. ನಾರಾಯಣಗೌಡ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ ನಿರ್ದೇಶನ ನೀಡಿದರು.
ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗದ ಆರು ಜಿಲ್ಲೆಗಳ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ, ಪ್ರಸ್ತಾವನೆಯಲ್ಲಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಕಂಪೌಂಡ್ ಗೋಡೆ ನಿರ್ಮಾಣ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಕಲ್ಪಿಸುವ ಮಾಹಿತಿ ಇರಬೇಕು. ಇದನ್ನು ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಮೂಲಸೌಕರ್ಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.
ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನಿಸುತ್ತಿದೆ. ಎಸ್ಸೆಸ್ಸೆಲ್ಸಿ , ದ್ವಿತೀಯ ಪಿಯುಸಿ ಸೇರಿದಂತೆ ಎಲ್ಲ ಹಂತದ ತರಗತಿಗಳ ಫಲಿತಾಂಶ ಸುಧಾರಣೆಯೊಂದಿಗೆ ಮೌಲ್ಯಯುತ ಶಿಕ್ಷಣ ಮಕ್ಕಳಿಗೆ ಸಿಗಬೇಕು. ಸ್ಪರ್ಧಾತ್ಮಕ ಮತ್ತು ನಾಗರಿಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಉತ್ತೀಣರಾಗಬೇಕು ಎನ್ನುವ ಅಭಿಲಾಷೆ ಹೊಂದಿದೆ. ಈ ನಿಟ್ಟಿನಲ್ಲಿ ಈಗಾಗಲೇ ಮಂಡಳಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇದರ ಮುಂದುವರಿದ ಭಾಗವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮೂಲಸೌಕರ್ಯ ಒದಗಿಸುವುದಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಉಪ ಕಾರ್ಯದರ್ಶಿ ಡಾ| ಬಿ. ಸುಶೀಲಾ, ಶಿಕ್ಷಣ ಸಲಹೆಗಾರ ಎನ್.ಬಿ. ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ಆಯುಕ್ತಾಲಯದ ಪ್ರಭಾರಿ ನಿರ್ದೇಶಕ ಟಿ. ನಾರಾಯಣಗೌಡ ಹಾಗೂ ಬೀದರ, ಕಲಬುರಗಿ, ಯಾದಗಿರಿ, ರಾಯಚೂರ, ಬಳ್ಳಾರಿ, ಕೊಪ್ಪಳ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಭಾಗವಹಿಸಿದ್ದರು.