ಕಲಬುರಗಿ: ಸರ್ಕಾರದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮಹತ್ತರ ಜವಾಬ್ದಾರಿ ಅಧಿಕಾರಿಗಳ ಮೇಲಿರಲಿದ್ದು, ಕಲಬುರಗಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುಮಾರು ಎರಡು ವರ್ಷ ಮಾಡಿದ ಸೇವೆ ಹೆಚ್ಚು ತೃಪ್ತಿ ನೀಡಿದೆ ಎಂದು ತುಮಕೂರು ಮತ್ತು ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ. ಹೇಳಿದರು.
ವರ್ಗಾವಣೆಯಾದ ಹಿನ್ನೆಲೆಯಲ್ಲಿ ನಗರ ಜಿಲ್ಲಾಡಳಿತದ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಆವರು ಮಾತನಾಡಿದರು. ತಾವು ಉದ್ಯೋಗ ಖಾತ್ರಿಗೆ ಹೆಚ್ಚು ಒತ್ತು ನೀಡಿದ ಫಲವಾಗಿ ಎಲ್ಲ ಅಧಿಕಾರಿಗಳ ಸಂಪೂರ್ಣ ಸಹಕಾರದಿಂದ ಉತ್ತಮ ಫಲಿತಾಂಶ ಬಂದಿದೆ.
ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆ ಒಂದನೇ ಸ್ಥಾನಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಾಳಜಿ ಮತ್ತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿದರೆ ಸಾಧನೆ ಕಟ್ಟಿಟ್ಟ ಬುತ್ತಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್ ಮಾತನಾಡಿ, ಜಿಲ್ಲೆಯು ಎಲ್ಲ ಕ್ಷೇತ್ರಗಳಲ್ಲಿ ವಿಶೇಷವಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದರೆ ಹೆಚ್ಚಿನ ಸಮಸ್ಯೆ ಉಂಟಾಗುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಪಂ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಲಕ್ಷಿಕಾಂತರೆಡ್ಡಿ, ಆರೋಗ್ಯ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಅನಿರುದ್ಧ ಶ್ರವಣ ಅವರ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.