ಕಲಬುರಗಿ: ಹತ್ತು ವರ್ಷಗಳ ನಂತರ ಸೆ. 17 ರಂದು ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರ್ಯಗಳಿಗೆ ಆದ್ಯತೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವ (Kalyana Karnataka Utsav) ಹಾಗೂ ಸಂಪುಟ ಸಭೆಯಲ್ಲಿ (Cabinet Meeting) ಪಾಲ್ಗೊಳ್ಳಲು ಸೋಮವಾರ (ಸೆ.16) ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಕ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖವಾಗಿ ಕಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಹಾಗೂ ಪ್ರತ್ಯೇಕ ಕೈಗಾರಿಕಾ ನೀತಿ ಜಾರಿ ಜತೆಗೆ ಕಕ ಭಾಗದ ಖಾಲಿ ಹುದ್ದೆಗಳ ಭರ್ತಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.
ನಾವು ಎಲ್ಲಾ ನಿರೀಕ್ಷೆಗಳನ್ನು ಈಡೇರಿಸಲಾಗದು. ಆದರೆ ಅವುಗಳಲ್ಲಿ ಪ್ರಮುಖವಾದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಕಕ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಿದ್ದು, ಇದೇ ಕಾರಣಕ್ಕೆ 371 ಜಾರಿ ತರಲಾಗಿದೆ. ಬಿಜೆಪಿಯವರು ಬೇಡಿಕೆಯನ್ನು ತಿರಸ್ಕರಿಸಿದ್ದರು. ಆದರೆ ಡಾ. ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಪ್ರಯತ್ನದಿಂದ ಸಾಕಾರಗೊಂಡಿತು ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದರು.
ನಾಗಮಂಗಲ ಅಹಿತಕರ ಘಟನೆ ಸಂಬಂಧಿಸಿದಂತೆ ಪೊಲೀಸರ ವೈಫಲ್ಯ ಕಂಡು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಆಗಿರುವ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ಕೊಡಕಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.