Advertisement

ಸಿಇಟಿ: ಲೋಪಕ್ಕೆ ಅಧಿಕಾರಿಗಳೇ ಹೊಣೆ

03:33 PM Apr 28, 2019 | Naveen |

ಕಲಬುರಗಿ: ಪ್ರಸಕ್ತ 2019-20ನೇ ಶೈಕ್ಷಣಿಕ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಏ. 29, 30ರಂದು ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸುವುದು. ಪರೀಕ್ಷಾ ಕರ್ತವ್ಯದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಕೇಂದ್ರದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿ.ಇ.ಟಿ. ಪರೀಕ್ಷೆಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪೂರ್ವ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಏ. 29 ರಂದು ಜೀವಶಾಸ್ತ್ರ , ಗಣಿತ, ಏ. 30 ರಂದು ಭೌತಶಾಸ್ತ್ರ , ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದ್ದು, ಒಟ್ಟು 8853 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ಪರೀಕ್ಷೆ ಪ್ರಮುಖ ಘಟ್ಟವಾಗಿದೆ. ವಿವಿಧ ವೃತ್ತಿ ಕೋರ್ಸುಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಯಲ್ಲಿ ಗಳಿಸುವ ಅಂಕವೇ ವಿದ್ಯಾರ್ಥಿಗಳಿಗೆ ಮಾನದಂಡ ಆಗಿರುವುದರಿಂದ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದರು.

ಪರೀಕ್ಷೆ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತದಿಂದ ತಲಾ 21 ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಪಾಲಕರನ್ನು ನೇಮಿಸಲಾಗಿದೆ. ನಕಲು ತಡೆಯಲೆಂದೆ ಪ್ರತಿ ಕೇಂದ್ರಕ್ಕೆ ಇಬ್ಬರಂತೆ ಒಟ್ಟು 42 ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ. ಇದಲ್ಲದೆ ಪರೀಕ್ಷೆ ದಿನದಂದು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಪ್ರತ್ಯೇಕ ತಪಾಸಣೆ ನಡೆಸಬೇಕು. ಬಂದೋಬಸ್ತ್ಗಾಗಿ ಪೊಲೀಸ್‌ ಸಿಬ್ಬಂದಿ ಒದಗಿಸಲು ಪೊಲೀಸ್‌ ಅಧೀಕ್ಷಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಇದರ ಹೊರತಾಗಿಯೂ ಕೇಂದ್ರದ ಮುಖ್ಯಸ್ಥರು ಸಂಬಂಧಿಸಿದ ಠಾಣೆಗೆ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.

ಪರೀಕ್ಷಾ ದಿನದ ಮುನ್ನವೇ ಕೇಂದ್ರದ ಅಧೀಕ್ಷಕರು ಆಸನ, ಕುಡಿಯುವ ನೀರು, ಬೆಳಕಿನ ವ್ಯವಸ್ಥೆ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಈ ಸಂಬಂಧ ವೀಕ್ಷಕರು ಪರೀಕ್ಷಾ ಕೇಂದ್ರಕ್ಕೆ ತೆರಳಿ ಕೇಂದ್ರದ ಮುಖ್ಯಸ್ಥರು, ಕೊಠಡಿ ಮೇಲ್ವಿಚಾರ‌ಕರ ಸಭೆ ನಡೆಸಿ ಪೂರ್ವ ಸಿದ್ಧತೆ ಪರಿಶೀಲಿಸಬೇಕು ಎಂದು ವೀಕ್ಷಕರಿಗೆ ನಿರ್ದೇಶನ ನೀಡಿದರು.

Advertisement

ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್, ಪೇಜರ್‌, ಬ್ಲ್ಯೂಟೂತ್‌, ವೈರಲೆಸ್‌ ಸೆಟ್, ಸ್ಲೈಡರೂಲ್ ಕ್ಯಾಲ್ಕುಲೇಟರ್‌, ವಾಚ್ ಕ್ಯಾಲ್ಕುಲೇಟರ್‌, ಪಠ್ಯ ಪುಸ್ತಕ ಸೇರಿದಂತೆ ಇನ್ನಿತರ ಯಾವುದೇ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ಗುರುತಿನ ಚೀಟಿ ಕಡ್ಡಾಯ: ಪರೀಕ್ಷೆಗೆ ಬರುವಾಗ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನಮೂದಿಸಿರುವ ಗುರುತಿನ ಚೀಟಿ ಪೈಕಿ ಯಾವುದಾದರೂ ಒಂದು ಮೂಲ ಗುರುತಿನ ಚೀಟಿ ತರುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಕೆಇಎ ರೂಟ್ ಅಧಿಕಾರಿ ಪ್ರಭಾಕರ ರೆಡ್ಡಿ, ಶಿಷ್ಠಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರ್‌, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಜರಿದ್ದರು.

ನಕಲಿಯಲ್ಲಿ ಭಾಗಿಯಾದರೆ ಕಠಿಣ ಕ್ರಮ
ಪರೀಕ್ಷಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಆವರಣ ಪ್ರವೇಶಿಸದಂತೆ ಕೇಂದ್ರದ ಮುಖ್ಯಸ್ಥರು ಗಮನಹರಿಸಬೇಕು. ಕೊಠಡಿ ಮೇಲ್ವಿಚಾರಕರು ಕೋಣೆಯಲ್ಲಿ ವಿದ್ಯಾರ್ಥಿಗಳ ನಿಗಾ ಮಾಡುವ ಬದಲು ಪತ್ರಿಕೆ, ಪುಸ್ತಕ ಓದುವಂತಿಲ್ಲ. ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಟಿ.ವಿ. ಅಳವಡಿಸಲಾಗಿದ್ದು, ಯಾವುದೇ ನಕಲುಗಳಿಗೆ ಅವಕಾಶವಿಲ್ಲ. ನಕಲು ಮಾಡುವ ಅಭ್ಯರ್ಥಿಗಳು ಮತ್ತು ಅದಕ್ಕೆ ಸಹಕರಿಸಿ ಅಕ್ರಮದಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಆರ್‌. ವೆಂಕಟೇಶಕುಮಾರ ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next