ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲೇ ರಾಜ್ಯ ಸರ್ಕಾರ ಮಕ್ಕಳಿಗೆ ಪೂರ್ಣ ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ಮಾಡಿ, ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ಎಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮೀ ಒತ್ತಾಯಿಸಿದರು.
ನಗರದ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಮ್ಮಿಕೊಂಡಿದ್ದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ಣ ಪ್ರಾಥಮಿಕ ಶಿಕ್ಷಣ ಸಾಧಕ-ಬಾಧಕಗಳು ಕುರಿತ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಕಾನ್ವೆಂಟ್ ಶಾಲೆಗಳ ಹಾವಳಿ ತಡೆಯಲು ಮತ್ತು ಸರ್ಕಾರಿ ಶಾಲೆಗಳನ್ನು ಉಳಿಸಲು ಪೂರ್ಣ ಪ್ರಾಥಮಿಕ ಶಿಕ್ಷಣ ಆರಂಭಿಸಲಾಗುತ್ತದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದರಿಂದ ಅಂಗನವಾಡಿಗಳು ಮುಚ್ಚಲಿವೆ ಹಾಗೂ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳಲ್ಲಿ 276 ಪೂರ್ಣ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸರ್ಕಾರ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದೆ. ಈ ಶಾಲೆಗಳು ಆರಂಭವಾದರೆ ಅಂಗನವಾಡಿಗಳಿಗೆ ಮಕ್ಕಳೇ ಬರುವುದಿಲ್ಲ. ಎಲ್ಲರೂ ಸರ್ಕಾರಿ ಶಾಲೆಗಳಿಗೆ ಹೋಗುತ್ತಾರೆ. ಹೀಗಾಗಿ ಅಂಗನವಾಡಿ ಕೇಂದ್ರಗಳ ಹಾಜರಾತಿ ಕುಸಿಯುತ್ತಿದೆ. ಅಲ್ಲದೇ ಅಂಗನವಾಡಿ ಕೇಂದ್ರಗಳು ಬಂದ್ ಆಗಲಿವೆ ಎನ್ನುವುದನ್ನೇ ಸರ್ಕಾರ ಮರೆತಿದೆ ಎಂದು ಅಸಮಾಧಾನ ಹೊರಹಾಕಿದರು.
ಅಂಗನವಾಡಿ ಕೇಂದ್ರಗಳನ್ನು ಉಳಿಸುವ ನಿಟ್ಟಿನಲ್ಲಿ ಮೇಲ್ದರ್ಜೆಗೆ ಏರಿಸಬೇಕು. ಅಂಗನವಾಡಿ ಕೇಂದ್ರಗಳಲ್ಲೇ ರಾಜ್ಯ ಸರ್ಕಾರ ಮಕ್ಕಳಿಗೆ ಪೂರ್ಣ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ನೀಡಬೇಕು. ಅವರನ್ನೇ ಶಿಕ್ಷಕರನ್ನಾಗಿ ನಿಯೋಜಿಸಬೇಕು. ಉದ್ಯೋಗ ಭದ್ರತೆ ನೀಡಿ, ಗೌರವ ಧನ ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಶಿವಗಂಗಾ ರುಮ್ಮಾ, ಎಐಟಿಯು ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ, ಗಂಗಮ್ಮ ಬಿರಾದಾರ, ಶಾಂತಾ ಘಂಟಿ, ಅಶೋಕ ಮ್ಯಾಗೇರಿ, ನಾಗಣ್ಣ ಗಣಜಲಖೇಡ ಮತ್ತಿತರರು ಇದ್ದರು.