ಕಲಬುರಗಿ: ಜಿಲ್ಲೆಯಲ್ಲಿ ಕುಡಿಯವ ನೀರಿನ ಸಮಸ್ಯೆ ನೀಗಿಸಲು ಕೋಟಿಗಟ್ಟಲೇ ಅನುದಾನ ಬಿಡುಗಡೆ ಮಾಡಿದ್ದರೂ ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದಿರುವುದು ಗಮನಕ್ಕೆ ಬಂದಿದ್ದು, ಇಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಗ್ರಾಮೀಣ ಮತ್ತು ನಗರ ನೀರು ಸರಬರಾಜು ಇಲಾಖೆ ಹಾಗೂ ಇತರ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಯೋಜನೆಗಳ ಕುರಿತು ಕ್ರಿಯಾ ಯೋಜನೆ ಸಲ್ಲಿಸುವಂತೆ ಹಲವು ಬಾರಿ ಸೂಚಿಸಲಾಗಿದೆ. ಆದರೂ, ಕ್ರಿಯಾ ಯೋಜನೆ ಸಲ್ಲಿಸದೇ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಅನುದಾನ ಬಿಡುಗಡೆ ಮಾಡಲು ಸರ್ಕಾರ ತಯಾರಿರುವಾಗ ಸಮಸ್ಯೆ ಬಗೆಹರಿಸಲು ನಿಮಗೇನು ಸಮಸ್ಯೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಗರ ಪಾಲಿಕೆ ವ್ಯಾಪ್ತಿಗೆ 75 ಕೋಟಿ ರೂ., ಗ್ರಾಮೀಣ ಭಾಗಕ್ಕೆ 30 ಕೋಟಿ ರೂ., ಪ್ರತಿಯೊಂದು ಜಿಲ್ಲಾ ಪಂಚಾಯಿತಿಗೆ ತಲಾ 50 ಲಕ್ಷ ರೂ., ತಾಲೂಕು ಪಂಚಾಯಿತಿಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ, ಕುಡಿಯುವ ನೀರಿನ ಬವಣೆ ತಪ್ಪಿಲ್ಲ. ಪ್ರತಿನಿತ್ಯ ಮಾಧ್ಯಮಗಳಲ್ಲಿ ಈ ಕುರಿತು ಸುದ್ದಿಗಳು ಬರುತ್ತಿವೆ. ನೀವು ಗಮನಿಸಿಲ್ಲವೇ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಹಣದ ಕೊರತೆ ಇಲ್ಲ. ಸಮಸ್ಯಾತ್ಮಕ ಗ್ರಾಮಗಳಿಗೆ ಜಿಪಿಎಸ್ ಅಳವಡಿಸಲಾಗಿರುವ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಅಗತ್ಯವಿರುವ ಕಡೆ ಬೋರ್‌ವೆಲ್ ಕೊರೆಸಿ ಅಥವಾ ಖಾಸಗಿಯವರಿಂದ ನೀರು ಖರೀದಿಸಿ ಸಮಸ್ಯೆ ಬಗೆಹರಿಸಬೇಕು. ಜಾನುವಾರುಗಳಿಗೆ ಮೇವಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿ, ಜಿಪಂ ಸಿಇಒ ಉಸ್ತುವಾರಿ ವಹಿಸಿಕೊಂಡು ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕೆಂದು ಸೂಚಿಸಿದರು.
ಶಾಸಕ ಎಂ.ವೈ. ಪಾಟೀಲ, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಎಸ್‌ಪಿ ಯಡಾ ಮಾರ್ಟಿನಾ ಮಾರ್ಬನ್ಯಾಂಗ್, ಸಹಾಯಕ ಆಯುಕ್ತ ರಾಹುಲ್ ಪಾಂಡ್ವೆ ಹಾಗೂ ಅಧಿಕಾರಿಗಳು ಹಾಜರಿದ್ದರು.