ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಜಿಲ್ಲೆಯ ಶಾಸಕರಿಗೆ ಪ್ರಾತಿನಿಧ್ಯ ನೀಡದೇ ಇರುವುದನ್ನು ಖಂಡಿಸಿ ಜೈ ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮೈತ್ರಿ ಸರ್ಕಾರದ ನಂತರ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಬಿಜೆಪಿಯಿಂದ ಐವರು ಶಾಸಕರು ಹಾಗೂ ಒಬ್ಬರು ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಆದರೂ, ಒಬ್ಬರಿಗೂ ಸಚಿವ ಸ್ಥಾನ ನೀಡದೇ ಇರುವುದು ತಾರತಮ್ಯ ಧೋರಣೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬೇರೆ ಜಿಲ್ಲೆಯವರಿಗೆ ಸಚಿವ ಸ್ಥಾನ ಕೊಟ್ಟರೆ ಕಲಬುರಗಿ ಜಿಲ್ಲೆ ಅಭಿವೃದ್ಧಿ ಆಗುವುದಾದರೂ ಹೇಗೆ? ಜಿಲ್ಲೆಯಲ್ಲಿ ಆಯ್ಕೆಯಾದ ಶಾಸಕರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು. ಸ್ಥಳೀಯ ಶಾಸಕರಿಗೆ ಎಲ್ಲ ಮಾಹಿತಿ ಇರುತ್ತದೆ. ಸಚಿವರ ಪಟ್ಟಿಯಲ್ಲಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೆಸರಿತ್ತು. ಕೊನೆ ಗಳಿಗೆಯಲ್ಲಿ ಅವರ ಹೆಸರನ್ನು ಕೈಬಿಟ್ಟಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅಲ್ಲದೇ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ ಅವರ ಹೆಸರೂ ಕೇಳಿಬಂದಿತ್ತು. ಅವರಿಗೂ ಸಹ ಸಚಿವ ಸ್ಥಾನ ಕೊಟ್ಟಿಲ್ಲ. ಐವರು ಶಾಸಕರು ಹಾಗೂ ಒಬ್ಬರು ವಿಧಾನ ಪರಿಷತ್ ಸದಸ್ಯರಲ್ಲಿ ಒಬ್ಬರನ್ನಾದರೂ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಕೂಡಲೇ ಜನರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ಇಲ್ಲವಾದಲ್ಲಿ ಸೆ.17ರಂದು ಮುಖ್ಯಮಂತ್ರಿಗಳು ನಗರಕ್ಕೆ ಬಂದಾಗ ಸಾರ್ವಜನಿಕರೊಂದಿಗೆ ಸೇರಿ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಜೈ ಕರವೇ ಅಧ್ಯಕ್ಷ ಸಚಿನ್ ಫರತಾಬಾದ್, ಖಾಜಾಪಾಶಾ ಬಾಗವಾನ್, ಸುರೇಶ ಚಿನಗುಂಡಿ, ರವಿಕುಮಾರ ಡೊಂಗರಗಾಂವ್, ಅಂಬು ಮಸ್ಕಿ, ಪ್ರೇಮ್, ಸುನೀಲ ಜಾಧವ, ಲಾಲುಪ್ರಸಾದ, ರಾಹುಲ್, ರಹೆಮಾನ್, ಗುಡು ಪಟೇಲ, ಶೇಖ್ ಅಹ್ಮದ್, ಜಾವಿದ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.