ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕಳೆದ ಎರಡ್ಮೂರು ವರ್ಷಗಳಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದು ಇದೂವರೆಗೂ ಆರಂಭಿಸದ ಕಾಮಗಾರಿಗಳನ್ನು ಇದೇ ಜೂನ್ ಅಂತ್ಯದೊಳಗೆ ಪ್ರಾರಂಭಿಸಬೇಕು, ಇಲ್ಲದಿದ್ದಲ್ಲಿ ಅಂತಹ ಕಾಮಗಾರಿಗಳನ್ನು ಕೈಬಿಡಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಬೀದರ ಮತ್ತು ಯಾದಗಿರಿ ಜಿಲ್ಲೆಯ ಅನುಷ್ಠಾನ ಏಜೆನ್ಸಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯಾದಗಿರಿ ಮತ್ತು ಬೀದರ ಜಿಲ್ಲೆಯಲ್ಲಿ ಹೈ.ಕ.ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಿ ಎಂದರು.
ಬಹುತೇಕ ಅನುಷ್ಠಾನ ಏಜೆನ್ಸಿಗಳು ಭೌತಿಕ ಕಾಮಗಾರಿ ಮುಗಿದರೂ ಪಾವತಿಗೆ ಬಿಲ್ ಸಲ್ಲಿಸಿಲ್ಲ. ಭೌತಿಕ ಕಾಮಗಾರಿ ಮುಗಿದ ಕೂಡಲೇ ಬಿಲ್ ಸಲ್ಲಿಸಿ. ಇದರಿಂದ ಸರ್ಕಾರದ ಮಟ್ಟದಲ್ಲಿ ಆರ್ಥಿಕ ಪ್ರಗತಿಯ ಮಾಹಿತಿ ನೀಡಲು ಅನುಕೂಲವಾಗುತ್ತದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಾಗ ಜಿಲ್ಲೆಗಳಲ್ಲಿ ಮಂಡಳಿಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಇರುವ ತೊಡಕುಗಳನ್ನು ಜಿಲ್ಲಾ ಹಂತದಲ್ಲಿಯೆ ನಿವಾರಿಸಬೇಕು ಎಂದು ಸೂಚಿಸಿದರು.
ಅಂಗನವಾಡಿ ಕಟ್ಟಡ ಇರದ ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಸರ್ಕಾರದ ನಿರ್ದೇಶನವಿದೆ. ಅದರಂತೆ ಮಂಡಳಿಯು ಹೆಚ್ಚಿನ ಒತ್ತು ನೀಡಿದೆ. ಆದರೆ ಸ್ಥಳೀಯವಾಗಿ ಅಧಿಕಾರಿಗಳು ನಿವೇಶನ ಸೇರಿದಂತೆ ಇನ್ನಿತರ ಸಣ್ಣಪುಟ್ಟ ಸಮಸ್ಯೆಗಳ ನೆಪವೊಡ್ಡಿ ಕಾಮಗಾರಿ ವಿಳಂಬ ಮಾಡುತ್ತಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಾರ್ಯದರ್ಶಿಗಳು, ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಬಳಿ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಿರ್ದೇಶನ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಯಾದಗಿರಿ ಮತ್ತು ಬೀದರ ಜಿಲ್ಲೆಗಳ ಲೋಕೋಪಯೋಗಿ, ನಿರ್ಮಿತಿ ಕೇಂದ್ರ, ಕೆ.ಆರ್.ಐ.ಡಿ.ಎಲ್, ಪಿಆರ್‌ಇಡಿ ಹಾಗೂ ಇನ್ನಿತರ ಅನುಷ್ಠಾನ ಏಜೆನ್ಸಿಗಳ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ಯಾದಗಿರಿ ಜಿಲ್ಲಾಧಿಕಾರಿ ಎಂ. ಕುರ್ಮಾರಾವ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಮನ್ನಿಕೇರಿ, ಬೀದರ ಜಿಪಂ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಮಂಡಳಿ ಉಪಕಾರ್ಯದರ್ಶಿ ಡಾ| ಬಿ. ಸುಶೀಲಾ, ಜಂಟಿ ಕಾರ್ಯದರ್ಶಿ ಬಸವರಾಜ ಹಾಗೂ ಯಾದಗಿರಿ, ಬೀದರ ಜಿಲ್ಲೆಗಳ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಹೈ.ಕ. ಮಂಡಳಿಗೆ ವಾರ್ಷಿಕ 1000 ಕೋಟಿ ರೂ. ಗಳಿಂದ 1500 ಕೋಟಿ ರೂ. ಗಳಿಗೆ ಅನುದಾನ ಹೆಚ್ಚಿಸಲಾಗಿದೆ. ಅಧಿಕಾರಿಗಳು ಅಸಡ್ಡೆ, ನಿಧಾನಗತಿಯಿಂದ ಹೊರಬಂದು ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ವಿನಿಯೋಗಿಸಿಕೊಳ್ಳಬೇಕು. ಸ್ಥಳೀಯ ಅಧಿಕಾರಿಗಳು ಅಭಿವೃದ್ಧಿಗಾಗಿ ಹೆಚ್ಚಿನ ಮುತುವರ್ಜಿ ವಹಿಸುವ ಅವಶ್ಯಕತೆಯಿದೆ.
•
ಸುಬೋಧ ಯಾದವ,
ಪ್ರಾದೇಶಿಕ ಆಯುಕ್ತರು,
ಎಚ್ಕೆಆರ್‌ಡಿಬಿ ಕಾರ್ಯದರ್ಶಿ