ಕಲಬುರಗಿ: ನಗರ ಮತ್ತು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಿಸಿಕೊಳ್ಳಲು ನಗರದ ಸುತ್ತ 10 ಕಿ.ಮೀ ಹಾಗೂ ತಾಲೂಕು ಕೇಂದ್ರಗಳ ಸುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಗುರುತಿಸಿ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಡಿ ಪಟ್ಟಣದಲ್ಲಿ 20*30 ಅಳತೆಯ ವಸತಿ ಯೋಜನೆಗೆ ಡಿಪಿಆರ್ ಕಾರ್ಯ ಮುಗಿದಿರುವುದರಿಂದ ಲೇಔಟ್ ಮಾಡುವುದಕ್ಕೂ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಶಹಾಬಾದನಲ್ಲಿ ಅಲೆಮಾರಿ ಜನಾಂಗಕ್ಕೆ ಮನೆಗಳ ನಿರ್ಮಾಣಕ್ಕೆ ಈಗಾಗಲೇ ಖಾಲಿ ಜಮೀನು ಸಿಕ್ಕಿದ್ದು, ಅಲ್ಲಿ 113 ಅಲೆಮಾರಿ ಕುಟುಂಬಗಳಿಗೆೆ ಮನೆಗಳ ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದೇವೆ ಎಂದು ನಗರಸಭೆ ಪೌರಾಯುಕ್ತರು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಮನೆ ನಿರ್ಮಾಣಕ್ಕೂ ಮುನ್ನ ಅಲೆಮಾರಿ ಜನಾಂಗದವರೊಂದಿಗೆ ಒಂದು ಬಾರಿ ಸಭೆ ನಡೆಸಿ ಅವರಿಂದ ಅಭಿಪ್ರಾಯ ಪಡೆಯಿರಿ ಎಂದರು.
ಅಲೆಮಾರಿ ಜನಾಂಗಕ್ಕೆ ಮನೆ ನಿರ್ಮಿಸಿಕೊಳ್ಳುವುದಕ್ಕೆ ಸರ್ಕಾರದಿಂದ 4 ಲಕ್ಷ ರೂ. ನೀಡಲಾಗುತ್ತಿದೆ. ಇದನ್ನು ಅಧಿಕಾರಿಗಳು ಸರಿಯಾಗಿ ಬಳಕೆ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಮನೆ ಸಿಗುವಂತೆ ನೋಡಿಕೊಳ್ಳಬೇಕು. ವಸತಿ ಯೋಜನೆಗಳ ಪ್ರದೇಶದಲ್ಲಿ ರಸ್ತೆ, ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರುನ್ನುಮ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಅಭಿಯಂತರ ಶಿವಣಗೌಡ ಪಾಟೀಲ ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಎಂಜಿನಿಯರ್‌ಗಳು ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.