ಕಲಬುರಗಿ: ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲು ಉದ್ದೇಶಿಸಿರುವ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸಬೇಕೆಂದು ಒತ್ತಾಯಿಸಿ ಮೇ 27ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸುವುದರ ಕುರಿತು ಮೇ 17ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹಿಂದಕ್ಕೆ ಪಡೆದು ಅಂಗನವಾಡಿ ಕೇಂದ್ರಗಳಲ್ಲೇ ತರಗತಿಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿದರು.
ಸರ್ಕಾರವು ಒಂದು ಯೋಜನೆ ಸಬಲಗೊಳಿಸಲು ಮತ್ತೂಂದು ಯೋಜನೆ ಬಲಹೀನಗೊಳಿಸಲು ಹೊರಟಿದೆ. 4,100 ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಮಾಡಿ ಎಲ್ಕೆಜಿ-ಯುಕೆಜಿ ತರಗತಿ ಪ್ರಾರಂಭಿಸಲಾಗುವುದು ಎಂದು ಹೇಳಿದೆ. ರಾಜ್ಯ ಸರ್ಕಾರದ ನಡೆಯಿಂದ ಅಂಗನವಾಡಿ ವ್ಯವಸ್ಥೆ ದುರ್ಬಲಗೊಳ್ಳುತ್ತದೆ. ಅಂಗನವಾಡಿ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಬರುತ್ತದೆ. 70,000 ಅಂಗನವಾಡಿ ಕಾರ್ಯಕರ್ತೆಯರಿಗೆ ತೊಂದರೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಅಂಗನವಾಡಿಯಲ್ಲಿಯೇ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸಬೇಕು. ಅಂಗನವಾಡಿ ನೌಕರರಿಗೆ ಕೌಶಲ್ಯ ವೃದ್ಧಿಸಲು ಸೂಕ್ತ ತರಬೇತಿ ಒದಗಿಸಬೇಕು. ಅಂಗನವಾಡಿಗಳಿಗೆ ಹಣಕಾಸು ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರಗಳಿಂದಲೇ ಮಕ್ಕಳಿಗೆ ಟಿ.ಸಿ ಕೊಡುವ ವ್ಯವಸ್ಥೆ ಮಾಡುವುದರಿಂದ ಮಕ್ಕಳು ಸರ್ಕಾರಿ ಶಾಲೆಗೆ ಬರುವಂತಾಗುತ್ತದೆ ಎಂದರು.
ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಿಸುವುದರಿಂದ ಎಲ್ಲ ವರ್ಗದ ಮಕ್ಕಳಿಗೂ ಅನುಕೂಲವಾಗಲಿದೆ. ಆದ್ದರಿಂದ ಮೇ 27ರಂದು ರಾಜ್ಯದ ಎಲ್ಲ ತಾಲೂಕು ಕೇಂದ್ರಗಳ ತಹಶೀಲ್ದಾರ್ ಕಚೇರಿಗಳ ಎದುರು ಪ್ರತಿಭಟನೆ ಹಮ್ಮಿಕೊಂಡು ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳಾದ ಗಂಗಮ್ಮ ಬಿರಾದಾರ, ಗೌರಮ್ಮ ಪಾಟೀಲ, ಮಹಾದೇವಿ ಪೋಲಕಪಳ್ಳಿ, ಶೇಖಮ್ಮ, ಪ್ರಭಾವತಿ, ಹುಸೇನಮ್ಮ ಮತ್ತಿತರರು ಹಾಜರಿದ್ದರು.