ಚಿತ್ರದುರ್ಗ: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಆದಷ್ಟು ಶೀಘ್ರ ನಡೆಸಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭ್ಯರ್ಥಿ ಕೆ.ಎಂ.ಶಿವಸ್ವಾಮಿ ಮತ್ತಿತರರು ಮನವಿ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದ ನಂತರ ಕೆ.ಎಂ. ಶಿವಸ್ವಾಮಿ ಮಾತನಾಡಿ, 2020 ಡಿಸೆಂಬರ್‌ನಲ್ಲಿ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿತ್ತು.
ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿಗಳು 2021ರ ಮೇ 9ರಂದು ಚುನಾವಣೆ ಜರುಗಿಸಲು ಎಲ್ಲ ಪ್ರಕ್ರಿಯೆ ಆರಂಭಿಸಿದ್ದರು. ಅದರಂತೆ ಕೇಂದ್ರ ಅಧ್ಯಕ್ಷ ಸ್ಥಾನ, ಎಲ್ಲ ಜಿಲ್ಲೆಗಳ ಜಿಲ್ಲಾಧ್ಯಕ್ಷ ಹಾಗೂ ಗಡಿನಾಡು ಅಧ್ಯಕ್ಷ ಸ್ಥಾನಗಳಿಗೂ ರಾಜ್ಯಾದ್ಯಂತ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕಾರ್ಯ ಕೈಗೊಂಡಿದ್ದರು. ಆದರೆ ದಿಢೀರ್‌ನೇ ಕೋವಿಡ್-19 ಸೋಂಕು ಹರಡುವ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಚುನಾವಣೆಯ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಮತದಾನ ಸೇರಿದಂತೆ ಇಡೀ ಚುನಾವಣೆ ಪ್ರಕ್ರಿಯೆಯನ್ನು ಯಥಾಪ್ರಕಾರ ಮುಂದೂಡಲಾಗಿತ್ತು. ಈಗ ರಾಜ್ಯದಲ್ಲಿ ಕೋವಿಡ್ ಸೋಂಕುಇಳಿಮುಖವಾಗುತ್ತಿದ್ದು, ರಾಜ್ಯದ ಎಲ್ಲಜಿಲ್ಲೆಗಳಲ್ಲಿ ಲಾಕ್‌ಡೌನ್ ನಿಯಮ ಸಡಿಲಗೊಳಿಸಲಾಗಿದೆ.
ಈಗಾಗಲೇ ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿ ಬಾಕಿ ಇರುವ ಸ್ಥಳಿಯ ಸಂಸ್ಥೆಗಳು, ಜಿಪಂ, ತಾಪಂ ಚುನಾವಣೆ ನಡೆಸಲು ಪರಿಷ್ಕೃತಮತದಾರರ ಪಟ್ಟಿ ಪ್ರಕಟಿಸಿದೆ. ಮೀಸಲಾತಿಪಟ್ಟಿಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸುವಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಅದರಂತೆ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಹೆಚ್ಚು ಜನಸಂದಣಿ ಇರುವುದಿಲ್ಲ. ಆದ್ದರಿಂದ ಶೀಘ್ರ ಮತದಾನ ನಡೆಸಬೇಕು ಎಂದು ಒತ್ತಾಯಿಸಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಂಗಕರ್ಮಿ ಕೆ.ಪಿ.ಎಂ. ಗಣೇಶಯ್ಯ, ವಿ.ಧನಂಜಯ ಕೆ.ಎಂ.ಏಕಾಂತಮೂರ್ತಿ, ಜಿ.ತಿಪ್ಪೇಸ್ವಾಮಿ, ಕಾಂತರಾಜ್ ಮತ್ತಿತರರಿದ್ದರು.