ಕಲಬುರಗಿ: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಘೋಷಣೆ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪನವರ ವಿರುದ್ಧ ಧಿಕ್ಕಾರ ಕೂಗಿದರು.
ಸರ್ಕಾರ ಮತ್ತು ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು, ರಸ್ತೆಯಲ್ಲೇ ಊರುಳು ಸೇವೆ ನಡೆಸಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ಕ್ರಮ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ನಂತರದಲ್ಲಿ ಮತ್ತೊಂದು ತಂಡದಲ್ಲಿ ಬಂದ ಕರವೇ (ನಾರಾಯಣ ಗೌಡ ಬಣ) ಪ್ರತಿಭಟನಾಕಾರನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡರು.
ಬಂದ್ ನೀರಸ: ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ಹೊರತುಪಡಿಸಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸಾರಿಗೆ ಬಸ್, ಆಟೋ, ಖಾಸಗಿ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ-ಮುಂಗಟ್ಟುಗಳ ಸಹ ಆರಂಭವಾಗಿವೆ. ಜನ ಜೀವನ ಮಾಮೂಲು ಆಗಿದೆ. ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಬಸ್ ನಿಲ್ದಾಣ, ರಾಮ ಮಂದಿರ, ಗಂಜ್ ಇತರೆಡೆಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೆಡೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ