ಬೆಂಗಳೂರು : ರಾಜ್ಯಾದ್ಯಂತ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರ್ನಾಟಕ ಬಂದಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸೇರಿದಂತೆ ಹಲವಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಟೌನ್ ಹಾಲ್ ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು.
ಅದೇ ರೀತಿ ನಗರದ ಕೆಲವು ಕಡೆಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯ ಕಿಚ್ಚು ಭುಗಿಲೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಾರಾಯಣಗೌಡ ನೇತೃತ್ವದಲ್ಲಿ ಗಾಂಧಿನಗರ, ಮೌರ್ಯ ವೃತ್ತ, ರೇಸ್ ಕೋರ್ಸ್ ರಸ್ತೆ, ಶಿವಾನಂದ ಸರ್ಕಲ್ ಗಳ ಮೂಲಕ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಈ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಕಲಬುರಗಿ: ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಸರಕಾರ ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಅಲ್ಲಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.