ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು “ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಬೆಳಿಗ್ಗೆ ಆರು ಗಂಟೆಯಿಂದಲೇ ಬಂದ್ ಆರಂಭವಾಗಿದ್ದು, ಬೆಂಗಳೂರಿನ ಕೆಲವೆಡೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿದ ಘಟನೆಗಳು ವರದಿಯಾಗಿದೆ.
ಬೆಂಗಳೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಆದರೆ ಕರಾವಳಿ ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಇದೆ.
ನಗರವ್ಯಾಪಿ 15 ಸಾವಿರಕ್ಕಿಂತ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಐವರು ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಭದ್ರತೆ ನಿಯೋಜನೆ ಮಾಡಲಾಗುತ್ತದೆ. 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.
ಆಯೋಜಕರಿಂದಲೇ ನಷ್ಟ ವಸೂಲು
“ಕರ್ನಾಟಕ ಬಂದ್’ ವೇಳೆ ಉಂಟಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಗಾರರಾಗಬೇಕಾಗುತ್ತದೆ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪಿಐಎಲ್ ಒಂದನ್ನು ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯ ಪೀಠ ಶುಕ್ರವಾರ ಈ ಅಭಿಪ್ರಾಯಪಟ್ಟಿತು. ಮಾಸ್ಕ್ ಹಾಕದೆ ಬಂದ್, ರ್ಯಾಲಿ, ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರನ್ನೂ ಬಿಡದೆ ದಂಡ ಹಾಕಿ ಎಂದು ನ್ಯಾಯಪೀಠ ಪೊಲೀಸರಿಗೆ ತಾಕೀತು ಮಾಡಿತು