ಬೆಂಗಳೂರು: ಶಿವಮೊಗ್ಗ-ಬೈಂದೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಕೆ.ಎಸ್.ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿ ಮಾತನಾಡಿದ್ದು, ಬುಧವಾರ (ಏ.03) ದೆಹಲಿಗೆ ಬರುವಂತೆ ಬುಲಾವ್ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Lok Sabha Poll:ಮುಜಾಫರ್ ಪುರ್ ಬಿಜೆಪಿ ಸಂಸದ ನಿಶಾದ್ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆ
ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ನಿರಾಕರಿಸಿರುವುದಕ್ಕೆ ಮುನಿಸಿಕೊಂಡಿರುವ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಏತನ್ಮಧ್ಯೆ ಅಮಿತ್ ಶಾ ಅವರ ಕರೆಯ ಹಿನ್ನೆಲೆಯಲ್ಲಿ ನಾಳೆ ದೆಹಲಿಗೆ ಪ್ರಯಾಣಿಸುವುದಾಗಿ ಈಶ್ವರಪ್ಪ ತಿಳಿಸಿದ್ದಾರೆ.
2009ರಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಡಿಯೂರಪ್ಪ ಮತ್ತು ಪುತ್ರ ಬಿವೈ ರಾಘವೇಂದ್ರ ಸ್ಪರ್ಧಿಸುವ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದರು. ಈ ಬಾರಿ ಬಿಜೆಪಿಯಿಂದ ಬಿವೈ ರಾಘವೇಂದ್ರ ಸ್ಪರ್ಧಿಸಿದ್ದು, ಕಾಂಗ್ರೆಸ್ ನಿಂದ ಗೀತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ.
ಕುರುಬ ಸಮುದಾಯದ ಈಶ್ವರಪ್ಪ ಅವರು ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಬಿಜೆಪಿ ಹಿರಿಯ ಮುಖಂಡ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಆದರೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಪಕ್ಷೇತರನಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.