Advertisement

Minister ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ಥಾನ: ಯತ್ನಾಳ್ ವಿರುದ್ಧ ದೂರು

06:36 PM Apr 06, 2024 | Team Udayavani |

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ವಿಚಾರಕ್ಕೆ ಸಂಬಂಧಿಸಿ ಎನ್ ಐಎ ಅಧಿಕಾರಿಗಳು ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನ ವಿಚಾರಣೆ ನಡೆಸಿದ ವಿಚಾರ ಚುನಾವಣೆ ವೇಳೆ ಹೊಸ ವಾಗ್ಸಮರಕ್ಕೆ ಕಾರಣವಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್ ಪೋಸ್ಟ್ ಮಾಡಿ ಬಿಜೆಪಿ ಕೇಸರಿ ಭಯೋತ್ಪಾದನೆ ನಡೆಸುತ್ತಿದೆ ಎಂದು ಆರೋಪಿಸಿದ್ದರು.

Advertisement

ದಿನೇಶ್ ಗುಂಡೂ ರಾವ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ ದಿನೇಶ್ ಗುಂಡೂರಾವ್ ಅವರ ಮನೆಯಲ್ಲೇ ಅರ್ಧ ಪಾಕಿಸ್ಥಾನ ಇದೆ’ ಎಂದು ಹೇಳಿಕೆ ನೀಡಿದ್ದರು. ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೂರು ದಾಖಲಿಸಿದ್ದು, ಇದೊಂದು ದೇಶದ್ರೋಹಿ ಹೇಳಿಕೆ ಎಂದು ಪರಿಗಣಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ?
ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು” ಎಂದು ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಪೋಸ್ಟ್ ಮಾಡಿದ್ದರು.

ಭಾರತೀಯತೆ ಪ್ರಶ್ನಿಸುವಂತಿಲ್ಲ
ನಾನು ಮುಸಲ್ಮಾನಳಾಗಿ ಹುಟ್ಟಿರಬಹುದು, ಆದರೆ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ತಬು ರಾವ್ ಪ್ರತಿಕ್ರಿಯೆ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೇ ಎಂದು ಪ್ರಶ್ನಿಸಿ ಮಾಡಿರುವ ಪೋಸ್ಟ್‌ನಲ್ಲಿ ಭಾರತ ಚುನಾವಣ ಆಯೋಗವನ್ನು ಸಹ ಟ್ಯಾಗ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next