Advertisement
– ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ.– ರೈತರು ತಮ್ಮ ಹಾಗೂ ತಮ್ಮ ನೆರೆಹೊರೆಯ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಅನುವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂ. ವರೆಗಿನ ಸಾಲಕ್ಕೆ ರಾಜ್ಯ ಸರ್ಕಾರವು ಶೇ. 7 ರಷ್ಟು ಬಡ್ಡಿ ಸಹಾಯಧನ ನೀಡಲಿದೆ.
– ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳ ಸಾಗಾಣಿಕೆಗಾಗಿ ನಾಲ್ಕು ಚಕ್ರದ ಪಿಕ್‌ಅಪ್ ವ್ಯಾನ್ (Pick-up Van) ಖರೀದಿಸಲು ಏಳು ಲಕ್ಷ ರೂ. ವರೆಗಿನ ಸಾಲವನ್ನು ಶೇ. ೪ರ ಬಡ್ಡಿ ದರದಲ್ಲಿ ವಿತರಿಸಲಾಗುವುದು.
– ಶೀಘ್ರ ಹಾಳಾಗುವ ಹಣ್ಣು, ಹೂವು, ತರಕಾರಿಗಳ ಬೆಲೆ ಕುಸಿತದಿಂದ ರೈತರು ಒತ್ತಡದ ಮಾರಾಟ ಮಾಡುವುದನ್ನು ತಪ್ಪಿಸಿ, ನ್ಯಾಯಯುತ ಬೆಲೆ ಒದಗಿಸುವುದಕ್ಕೆ ನೆರವಾಗಲು ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಓಅಕಕಉಇ ಸಹಯೋಗದೊಂದಿಗೆ ಮಿನಿ ಶೀತಲ ಗೃಹಗಳನ್ನು ಸ್ಥಾಪಿಸಲಾಗುವುದು.
– ಕೃಷಿ ಉತ್ಪನ್ನ ಮಾರುಕಟ್ಟೆಗಳು, ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಒದಗಿಸಿ, ಅವರ ಹಿತ ಕಾಯುವ ಸಂಸ್ಥೆಗಳಾಗಬೇಕು ಎಂಬ ಆಶಯ ನಮ್ಮ ಸರ್ಕಾರದ್ದಾಗಿದೆ. ಈ ಉದ್ದೇಶದಿಂದ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಬಲಪಡಿಸಿ, ಆನ್‌ಲೈನ್ ಮಾರುಕಟ್ಟೆ ವ್ಯವಸ್ಥೆಯನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳಿಸಲಾಯಿತು.
– ಹಿಂದಿನ ಸರ್ಕಾರವು ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸದೃಢ ಮಾರುಕಟ್ಟೆ ಜಾಲವನ್ನು ದುರ್ಬಲಗೊಳಿಸಿ ಎ.ಪಿ.ಎಂ.ಸಿ ಗಳ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ರೈತರ ಬದುಕಿನ ಅನಿಶ್ಚಿತತೆಗೆ ಕಾರಣವಾಗಿದೆ. ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯ ಮೊದಲು, 2018 19 ರಲ್ಲಿ ರಾಜ್ಯದ 167 ಕೃಷಿ ಉತ್ಪನ್ನ ಮಾರುಕಟ್ಟೆಗಳ ಒಟ್ಟು ಆದಾಯ 570 ರಿಂದ 600 ಕೋಟಿ ರೂ. ಗಳಷ್ಟಿದ್ದು, 2022 23 ರಲ್ಲಿ ಎ.ಪಿ.ಎಂ.ಸಿ. ಕಾಯ್ದೆ ತಿದ್ದುಪಡಿಯ ನಂತರ ಕೇವಲ 193 ಕೋಟಿ ರೂ.ಗಳಿಗೆ ಕುಸಿದಿದೆ. ಅಲ್ಲದೆ, ಮುಕ್ತ ಮಾರುಕಟ್ಟೆಯಲ್ಲಿ ಖಾಸಗಿ ಸಂಸ್ಥೆಗಳು ರೈತರನ್ನು ವಂಚಿಸಿದ, ಶೋಷಣೆಗೆ ಒಳಪಡಿಸಿದ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಈ ಅವ್ಯವಸ್ಥೆಯನ್ನು ಸರಿಪಡಿಸಿ ರೈತರ ಹಿತರಕ್ಷಣೆ ಮಾಡಲು ನಮ್ಮ ಸರ್ಕಾರವು ಸದರಿ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿದೆ.
– ʻಕಾಯಕ ನಿಧಿʼ ಯೋಜನೆಯಡಿ ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಮಾಲರು ಮರಣ ಹೊಂದಿದಲ್ಲಿ ಅವರ ಶವಸಂಸ್ಕಾರಕ್ಕಾಗಿ ನೀಡುವ ಮೊತ್ತವನ್ನು 10,000 ರೂ. ಗಳಿಂದ 25,000 ರೂ. ಗಳಿಗೆ ಹೆಚ್ಚಿಸಲಾಗುವುದು.